ಬೆಂಗಳೂರು,ಅಕ್ಟೋಬರ್,22,2021(www.justkannada.in): ದೇಶದಲ್ಲಿ ನೂರುಕೋಟಿ ಕೊರೋನಾ ಲಸಿಕೆ ನೀಡಿಕೆ ಪೂರ್ಣವಾದ ಹಿನ್ನೆಲೆ, ಕೇಂದ್ರ ಸರ್ಕಾರ ಶತಕೋಟಿ ಲಸಿಕೆ ಸಂಭ್ರಮ ಆಚರಿಸಿದ್ದು ಈ ಮಧ್ಯೆ ಇಂದು ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಇದೀಗ ಮಾಜಿ ಸಿಎಂ ಸಿದ್ಧರಾಮಯ್ಯ ಟ್ವಿಟ್ ಮೂಲಕ ತಿರುಗೇಟು ನೀಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, ದೇಶದ 139 ಕೋಟಿ ಜನರಲ್ಲಿ 29 ಕೋಟಿ ಜನರಿಗೆ ಮಾತ್ರ ಎರಡು ಡೋಸ್ ಕೊರೊನಾ ಲಸಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದ್ದಾರೆ.
ದೇಶದ 139 ಕೋಟಿ ಜನರಲ್ಲಿ 68 ಕೋಟಿ ಜನರಿಗೆ ಇನ್ನೂ ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ. ಯಾವ ಸಾಧನೆಗೆ ಈ ಸಂಭ್ರಮಾಚರಣೆ? ಘೋಷಿತ ಗುರಿಯಂತೆ ದೇಶದ 103 ಕೋಟಿ ವಯಸ್ಕರರಿಗೆ ಡಿಸೆಂಬರ್ 31ರೊಳಗೆ 2 ಡೋಸ್ ನೀಡಲು 206 ಕೋಟಿ ಲಸಿಕೆ ಅಗತ್ಯವಿದೆ. ಕೊಟ್ಟಿರುವುದು 100 ಕೋಟಿ ಮಾತ್ರ. ಗುರಿ ತಲುಪಲು ಪ್ರತಿದಿನ 1.51 ಕೋಟಿ ಲಸಿಕೆ ನೀಡಬೇಕಾಗಿದೆ ಇದಕ್ಕಾಗಿ ಬೇಕಾಗಿರುವುದು ಸಿದ್ಧತೆ ಖಾಲಿ ತಟ್ಟೆ ಪ್ರಚಾರವಲ್ಲ ಎಂದು ಸಿದ್ಧರಾಮಯ್ಯ ತಿರುಗೇಟು ನೀಡಿದರು.
ಅಮೆರಿಕ 56% ಲಸಿಕೆ ನೀಡಿದೆ, ಹಾಗೆಯೇ ಚೀನಾ 70% ಜನರಿಗೆ ಎರಡು ಡೋಸ್ ಕೊರೊನಾ ಲಸಿಕೆ ನೀಡಿ ಬೂಸ್ಟರ್ ಲಸಿಕೆ ನೀಡುವ ಸಿದ್ಧತೆಯಲ್ಲಿದೆ. ಭಾರತದಲ್ಲಿ ಕೇವಲ 21% ಜನಸಂಖ್ಯೆಗೆ ಮಾತ್ರ ಎರಡು ಡೋಸ್ ಲಸಿಕೆ ನೀಡಲಾಗಿದೆ. ಯಾವ ಸಾಧನೆಗೆ ಸಂಭ್ರಮ? ವೈಫಲ್ಯದ ವಿಶ್ವಗುರು ಕುಖ್ಯಾತಿಗಾಗಿಯೇ? ಎಂದು ಸಿದ್ಧರಾಮಯ್ಯ ಟಾಂಗ್ ನೀಡಿದರು.
Key words: 100 crore-Vaccine -Former CM-Siddaramaiah -PM -Modi’s government.