ಬೆಂಗಳೂರು. ಆಗಸ್ಟ್ 28, 2021 (www.justkannada.in): ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.
ಕಾಲೇಜು ಶಿಕ್ಷಣ ಇಲಾಖೆ ಖಾಲಿ ಹುದ್ದೆಗಳನ್ನು ವಿಶೇಷ ನೇಮಕಾತಿ ನಿಯಮಗಳ ಅನ್ವಯ ಭರ್ತಿ ಮಾಡುವ ಉದ್ದೇಶದಿಂದ ಆಯ್ಕೆ ಪ್ರಕ್ರಿಯೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವನ್ನು ಆಯ್ಕೆ ಪ್ರಾಧಿಕಾರವನ್ನಾಗಿ ಮಾಡಿ ಅಧಿಸೂಚನೆ ಹೊರಡಿಸಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಮೀಸಲಾತಿ, (ನೇರ, ಸಮತಳ) ರೋಸ್ಟರ್ ಬಿಂದುಗಳ ಅನ್ವಯ ಆಯ್ಕೆ ಮಾಡಿ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಕಾಲೇಜು ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಒಟ್ಟು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಲ್ಲಿ ಶೇ.95ರಷ್ಟು ನೇರನೇಮಕಾತಿ ಹಾಗೂ ಶೇ.5ರಷ್ಟು ಇಲಾಖೆಯ ಗ್ರೂಪ್ ಸಿ ವೃಂದದಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ.