ಬೆಳಗಾವಿ,ಮಾರ್ಚ್,20,2023(www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯುವ ನಿಧಿ ಹೆಸರಿನಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3,000 ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ ನೀಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ಕಾರ್ಡ್ ಅನ್ನು ಬಿಡುಗಡೆ ಮಾಡಿದರು. ಗೃಹಲಕ್ಷ್ಮೀ ಯೋಜನೆ ಮೂಲಕ ಬಡ ಕುಟುಂಬಗಳ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ, ಬಡವರಿಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಹಾಗೂ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಕಾಂಗ್ರೆಸ್ ಈಗಾಗಲೇ ಘೋಷಿಸಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಪದವೀಧರರಿಗೆ 2ವರ್ಷಗಳ ಕಾಲ ಪ್ರತಿ ತಿಂಗಳು 3,000 ರೂ. ಭತ್ಯೆ ನೀಡುವುದಾಗಿ ಘೋಷಿಸಿದೆ.
ಬಳಿಕ ಸಮಾವೇಶದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಮಹತ್ವವಾದದ್ದು. ಇದು ದೇಶಕ್ಕೆ ಒಂದು ಸಂದೇಶ ಕೊಡುವ ಚುನಾವಣೆ ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಬಂದಿದ್ದೇನೆ. ಬೆಳಗಾವಿ 18 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ . ರಾಜ್ಯ ಸರ್ಕಾರದ 40 ಪರ್ಸೆಂಟ್ ಕಮಿಷನ್ ಬಗ್ಗೆ ಪ್ರಧಾನಿ ಮೋದಿ ಅಮಿತ್ ಶಾಗೆ ಗುತ್ತಿಗೆದಾರರು ದೂರು ನೀಡಿದ್ದಾರೆ. ಕಮಿಷನ್ ಆರೋಪದ ಬಗ್ಗೆ ಮೊದಲು ಕೇಂದ್ರ ಸರ್ಕಾರ ತನಿಖೆ ಮಾಡಲಿ. ಆನಂತರ ರಾಹುಲ್ ಗಾಂಧಿ ಬಗ್ಗೆ ಮಾತನಾಡಲಿ ಎಂದು ಟಾಂಗ್ ನೀಡಿದರು.
ಮಲ್ಲಿಕಾರ್ಜುನ ಖರ್ಗೆ ರಿಮೋಟ್ ಕಂಟ್ರೋಲ್ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿದ ಮಲ್ಲಿಕಾರ್ಜುನ ಖರ್ಗೆ, ಹೌದು ನಾನು ರಿಮೋಟ್ ಕಂಟ್ರೋಲ್ ನಲ್ಲಿ ಇದ್ದೇನೆ. ಆದರೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಯಾರ ಕಂಟ್ರೋಲ್ ನಲ್ಲಿದ್ದಾರೆ ಎಂದು ಕುಟುಕಿದರು. ಭಾರತ್ ಜೋಡೋ ಯಾತ್ರೆ ವೇಳೆ ಜನ ತಮ್ಮ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದರು. ದೇಶದಲ್ಲಿ ಜಾತಿ ಪದ್ದತಿ ಅಸ್ಪೃಶ್ಯತೆ ಆಚರಣೆ ಇನ್ನು ಇದೆ. ಇದನ್ನ ಹೇಳಿದ್ದಕ್ಕೆ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದ್ದಾರೆ. ಜೈಲಿಗೆ ಹಾಕಿದರೂ ನಾವು ಸತ್ಯವನ್ನ ಹೇಳುವುದನ್ನ ಬಿಡುವುದಿಲ್ಲ . ಖಾಲಿ ಇರುವ ಹುದ್ದೆಗಳನ್ನ ಸರ್ಕಾರ ಭರ್ತಿ ಮಾಡುತ್ತಿಲ್ಲ . ನಾವು ಅಧಿಕಾರಕ್ಕೆ ಬಂದರೇ ಹುದ್ದೆ ಭರ್ತಿ ಮಾಡುತ್ತೇವೆ. ಒಂದೆವರೆ ವರ್ಷದಲ್ಲಿ ಒಂದುವರೆ ಲಕ್ಷ ಹುದ್ದೆ ಭರ್ತಿ ಮಾಡುತ್ತೇವೆ ಎಂದು ಭರವಸೆ ನೀಡಿದರು.
Key words: 3 thousand -per month -unemployed graduates-Scheme -announced – Congress.