ಬೆಂಗಳೂರು,ಆ,22,2019(www.justkannada.in): ಇತ್ತೀಚೆಗಷ್ಟೆ ದೆಹಲಿಗೆ ತೆರಳಿ ಸಚಿವ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ಪಡೆದುಕೊಂಡು ಬಂದಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆ ಬಳಿಕ ಇದೀಗ ಮತ್ತೆ ಪಕ್ಷದ ಹೈಕಮಾಂಡ್ ಭೇಟಿಗೆ ನವದೆಹಲಿಗೆ ಪ್ರಯಾಣಿಸಲಿದ್ದಾರೆ.
ಸದ್ಯ 17 ಮಂದಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಆದರೆ ಅವರಿಗೆ ಇನ್ನು ಖಾತೆ ಹಂಚಿಕೆ ಮಾಡಿಲ್ಲ. ಈ ಮಧ್ಯೆ ಸಚಿವ ಸ್ಥಾನ ಸಿಗದಿದ್ದಕ್ಕೆ ಹಲವು ಶಾಸಕರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಈ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸಲು ಸಿಎಂ ಬಿಎಸ್ ಯಡಿಯೂರಪ್ಪ ಇಂದು ದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಇಂದು ಸಂಜೆ ದೆಹಲಿಗೆ ಹೋಗ್ತೇನೆ. ದೆಹಲಿಯಲ್ಲಿ ಪ್ರಧಾನಿ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನ ಭೇಟಿಯಾಗ್ತೇನೆ. ಭೇಟಿ ಬಳಿಕ ಬೆಂಗಳೂರಿಗೆ ವಾಪಸ್ ಆಗ್ತೇನೆ ಎಂದು ತಿಳಿಸಿದ್ದಾರೆ.
ಅನರ್ಹ ಶಾಸಕರು ದೆಹಲಿಗೆ ಹೋದ ಬೆನ್ನಲ್ಲೆ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಚಿವಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಉಮೇಶ್ ಕತ್ತಿ ಮತ್ತು ಬಾಲಚಂದ್ರ ಜಾರಕಿಹೊಳಿಗೆ ಕೈತಪ್ಪಿದ ಹಿನ್ನೆಲೆ ಇಬ್ಬರು ಶಾಸಕರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಅವರನ್ನ ಸಮಾಧಾನ ಪಡಿಸಲು ಇಬ್ಬರಿಗೂ ಸಚಿವ ಸ್ಥಾನ ಕೊಡಿಸಲು ಸಿಎಂ ಬಿಎಸ್ ಯಡಿಯೂರಪ್ಪ ಕಸರತ್ತು ನಡೆಸುತ್ತಿದ್ದಾರೆ. ಈ ಬಗ್ಗೆ ಹಾಗೂ ಖಾತೆ ಹಂಚಿಕೆ ಬಗ್ಗೆ ಪಕ್ಷದ ಹೈಕಮಾಂಡ್ ಜತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
Key words: cm bs yeddyurappa- newdelhi-discuss-amith sha-PM modi