ಬೆಂಗಳೂರು,ಫೆಬ್ರವರಿ,17,2023(www.justkannada.in): ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನ ಅಭಿವೃದ್ದಿಗೆ ಆದ್ಯತೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ ನಲ್ಲಿ ಹಲವು ಕಾರ್ಯಕ್ರಮಗಳನ್ನ ಘೋಷಣೆ ಮಾಡಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬೆಂಗಳೂರು ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿಯ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ರೂಪಿಸುವುದರೊಂದಿಗೆ ಜನರ ಬದುಕಿನ ಗುಣಮಟ್ಟ ಹೆಚ್ಚಿಸಲು ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳಿಗೂ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದಲ್ಲಿ 6,000 ಕೋಟಿ ವೆಚ್ಚದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹೈ ಡೆನ್ಸಿಟಿ ಯೋಜನೆಯಡಿಯಲ್ಲಿ ಒಟ್ಟು 108 ಕಿ.ಮೀ. ರಸ್ತೆಗಳನ್ನು 273 ಕೋಟಿ ರೂ. ಗಳ ಅಂದಾಜಿನಲ್ಲಿ ತೆಗೆದುಕೊಳ್ಳಲಾಗಿದೆ. ಮಳೆ ನೀರು ಮುಕ್ತವಾಗಿ ಹರಿಯುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರವಾಹವನ್ನು ತಪ್ಪಿಸಲು, ಒಟ್ಟು 195 ಕಿ.ಮೀ. ಉದ್ದದ ಚರಂಡಿ ಮತ್ತು ಕಲ್ವರ್ಟ್‌ಗಳ ಅಭಿವೃದ್ಧಿಗಾಗಿ 1,813 ಕೋಟಿ ರೂ. ಗಳನ್ನು ಒದಗಿಸಲಾಗಿದೆ ಎಂದು ಘೋಷಿಸಿದರು.
ಬೆಂಗಳೂರು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು, ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದರು.
ಹಾಗೆಯೇ ಬೆಂಗಳೂರು ಮಹಾನಗರದ ಮಾರುಕಟ್ಟೆಗಳು, ಬೃಹತ್ ವಾಣಿಜ್ಯ ಮಳಿಗೆಗಳು ಮತ್ತಿತರ ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ ‘She Toilet’ ಗಳನ್ನು ನಿರ್ಮಿಸಲಾಗುವುದು. ಈ ಸಂಕೀರ್ಣದಲ್ಲಿ ಶೌಚಾಲಯಗಳು, ಫೀಡಿಂಗ್ ರೂಂಗಳು, ಮೊಬೈಲ್ ಚಾರ್ಜಿಂಗ್, ತುರ್ತು SOS ಸೌಲಭ್ಯಗಳು ಇತ್ಯಾದಿಯನ್ನು ಒಳಗೊಂಡಂತೆ, ಆಧುನಿಕ ವಿನ್ಯಾಸದೊಂದಿಗೆ 50 ಕೋಟಿ ರೂ. ಗಳಲ್ಲಿ ನಿರ್ಮಿಸಲಾಗುವುದು ಎಂದರು.
Key words: Bangalore –city- development- CM Bommai- budget.