ಬೆಂಗಳೂರು, ಆಗಸ್ಟ್ 05, 2023 (www.justkannada.in): ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಸರ್ಕಾರ ಮರು ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಮೌಖಿಕವಾಗಿ ಹೇಳಿದೆ.
ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಹಾಗೂ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ಪೀಠ ಈ ಕುರಿತು ವಿಚಾರಣೆ ನಡೆಸಿದ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಸರ್ಕಾರ ಮರು ಪರೀಕ್ಷೆ ನಡೆಸಿದರೆ ಸಮಸ್ಯೆ ಏನು, (ಅರ್ಜಿದಾರರು) ಪರೀಕ್ಷೆ ಬರೆದು ಉತ್ತೀರ್ಣರಾಗಬಹುದಲ್ಲವೇ, ಅದೇ ರೀತಿ ಬೇರೆಯವರೂ ಪರೀಕ್ಷೆ ಬರೆಯಲಿ. ಸರ್ಕಾರ ಮರು ಪರೀಕ್ಷೆ ನಡೆಸಬಹುದು ಎನ್ನುವುದು ನಮ್ಮ ಅಭಿಪ್ರಾಯವಾಗಿದೆ ಎಂದು ಕೋರ್ಟ್ ಹೇಳಿದೆ.
ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ ನಡೆಸಲು ಹಿಂದಿನ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ 100ಕ್ಕೂ ಅಧಿಕ ಅಭ್ಯರ್ಥಿಗಳು ಕೋರ್ಟ್ ಮೆಟ್ಟಿಲೇರಿದ್ದಾರೆ.