ಮೈಸೂರು,ಆಗಸ್ಟ್,24,2023(www.justkannada.in): ಗೃಹಲಕ್ಷ್ಮಿ ಯೋಜನೆ ಇಡೀ ದೇಶದಲ್ಲೇ ದೊಡ್ಡ ಕಾರ್ಯಕ್ರಮವಾಗಿದ್ದು ಈಗಾಗಲೇ 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ. ಆಗಸ್ಟ್ 30 ರಂದು ಮೈಸೂರಿನಲ್ಲಿ ಯೋಜನೆಗೆ ಚಾಲನೆ ಸಿಗಲಿದ್ದು 1 ಲಕ್ಷ ಜನ ಕಾರ್ಯಕ್ರಮದಲ್ಲಿ ಭಾಗವಹಿಸಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
ಮೈಸೂರನಲ್ಲಿ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲನೆ ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರಿಸಿದ ವಿಚಾರದಲ್ಲಿ ಯಾವ ರಾಜಕೀಯವೂ ಇಲ್ಲ. ಬೆಳಗಾವಿಯಲ್ಲಿ ಮುಂದೆ ಇನ್ನೊಂದು ಕಾರ್ಯಕ್ರಮ ಮಾಡಲು ಪ್ಲಾನ್ ಮಾಡುತ್ತಿದ್ದೇವೆ. ಎಲ್ಲರ ಒಮ್ಮತದ ತೀರ್ಮಾನದಿಂದ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಬೆಳಗಾವಿಯಲ್ಲಿ ನಾವು ಎರಡೂ ಲೋಕಸಭಾ ಕ್ಷೇತ್ರ ಗೆಲ್ಲುತ್ತೇವೆ ಎಂದರು.
ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆ ಮಾಡುವ ಪ್ಲಾನ್ ಇತ್ತು. ಅಕ್ಕಿ ವಿಚಾರದಲ್ಲಿ ಒಂದಷ್ಟು ಅಡೆತಡೆ ಇದೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮವನ್ನು ಇಲ್ಲಿಂದ ಆರಂಭಿಸುತ್ತಿದ್ದೇವೆ. ಬೆಂಗಳೂರಿನಲ್ಲೂ ಕಾರ್ಯಕ್ರಮ ಮಾಡುವ ಯೋಚನೆ ಮಾಡಿದ್ದೆವು. ಆದರೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ ಎಂದು ಮೈಸೂರಿಗೆ ಸ್ಥಳಾಂತರ ಮಾಡಿದ್ದೇವೆ. ಆಗಸ್ಟ್ 30ರಂದು ಒಂದು ಬಟನ್ ಕೂಡಲೇ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಹಣ ಸಂದಾಯವಾಗುತ್ತದೆ. ಅದರ ಮೇಸೆಜ್ ಗಳು ಅವರ ಮೊಬೈಲ್ ನಂಬರ್ ಗಳಿಗೆ ಬರುತ್ತವೆ. ನಮ್ಮಲ್ಲಿ ಹಣದ ಕೊರತೆ ಇಲ್ಲ. ಎಲ್ಲಾ ಹಣವನ್ನು ಬ್ಯಾಂಕ್ ಗೆ ಡೆಪಾಸಿಟ್ ಮಾಡಿದ್ದೇವೆ. ಸರ್ವರ್ ಸಮಸ್ಯೆ ಆದರೆ ಒಂದಷ್ಟು ಜನರಿಗೆ ಹಣ ಬರುವುದು ತಡವಾಗಬಹುದು ಅಷ್ಟೆ ಎಂದು ತಿಳಿಸಿದರು.
ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ ಜಿಲ್ಲೆಗಳ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕಾಗಿ 2 ಸಾವಿರ ಬಸ್ ಗಳ ವ್ಯವಸ್ಥೆ ಮಾಡಲಾಗುತ್ತದೆ. ಕೆಲ ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ. ರಾಜ್ಯದಾದ್ಯಂತ ಏಕಕಾಲಕ್ಕೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಆನ್ ಲೈನ್ ಮೂಲಕ ಸಂವಾದಕ್ಕೂ ವ್ಯವಸ್ಥೆ ಮಾಡುತ್ತೇವೆ. ಕಾರ್ಯಕ್ರಮ ಸ್ಥಳದಲ್ಲಿ ಕುಡಿಯುವ ನೀರು ಹೊರತುಪಡಿಸಿ ಬೇರೆ ಯಾವುದೇ ವ್ಯವಸ್ಥೆ ಇರುವುದಿಲ್ಲ. 140 ಅಡಿ ಸ್ಕ್ರೀನ್ ಅಳವಡಿಸಲಾಗುತ್ತದೆ. ಇದು ಸರ್ಕಾರಿ ಕಾರ್ಯಕ್ರಮ ಆಗಿದ್ದು, ಪಕ್ಷಾತೀತ ಆಗಿರಲಿದೆ. ಎಲ್ಲಾ ಪಕ್ಷಗಳ ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಬಹುದು. ಕಾರ್ಯಕ್ರಮ ಸ್ಥಳದಲ್ಲಿ ಒಂದು ಲಕ್ಷ ಚೇರ್ ಅಳವಡಿಸಲಾಗುತ್ತದೆ ಎಂದು ತಿಳಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ರೈತರ ಹಿತವನ್ನು ಕಾಪಾಡುತ್ತೇವೆ. ನ್ಯಾಯಾಲಯಕ್ಕೆ ಎಷ್ಟು ಗೌರವ ಕೊಡಬೇಕು ಅಷ್ಟೇ ಗೌರವವನ್ನು ಕೊಡುತ್ತೇವೆ. ಈ ಬಗ್ಗೆ ಸಭೆ ಮಾಡಿದ್ದೇವೆ. ನಾವು ರೈತರ ಹಿತ ಕಾಪಾಡುತ್ತೇವೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.
Key words: Grihalakshmi Yojana -launched – Mysore – August 30- DCM- DK Shivakumar.