ಬೆಂಗಳೂರು, ಜೂನ್,17,2024 (www.justkannada.in): ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಸಿಐಡಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಪ್ರಕರಣ ತನಿಖೆ ನಡೆಸುತ್ತಿದ್ದ ಡಿವೈಎಸ್ಪಿ ಪೃಥ್ವಿ ಬದಲಿಗೆ ತನಿಖಾಧಿಕಾರಿಯಾಗಿ ನೇಮಕಗೊಂಡಿರುವ ಡಿವೈಎಸ್ಪಿ ಪುನೀತ್ ಎದುರು ಮಾಜಿ ಸಿಎಂ ಬಿಎಸ್ವೈ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ. ಅಪ್ರಾಪ್ತ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಸಂತ್ರಸ್ತೆ ತಾಯಿ ಮಾರ್ಚ್ 3ರಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು , ಪ್ರಕರಣ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ.
ಈ ಮಧ್ಯೆ ವಿಚಾರಣೆಗೆ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪಗೆ ಸಿಐಡಿ ಅಧಿಕಾರಿಗಳು 2 ಬಾರಿ ನೋಟಿಸ್ ನೀಡಿದ್ದರು. ಆದರೆ ವಿಚಾರಣೆಗೆ ಅವರು ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸುವಂತೆ ಕೋರಿ ನಗರದ 1ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿದ ನ್ಯಾಯಪೀಠ ಬಿಎಸ್ವೈ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು.
ಈ ಮಧ್ಯೆ ಪ್ರಕರಣವನ್ನ ರದ್ದುಕೋರಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಬಿಎಸ್ ಯಡಿಯೂರಪ್ಪರನ್ನು ಬಂಧಿಸದಂತೆ ನಿರ್ದೆಶನ ನೀಡಿತ್ತು. ಅಲ್ಲದೆ ಜೂನ್ 17 ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪಗೆ ಕೋರ್ಟ್ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಿಐಡಿ ಅಧಿಕಾರಿಗಳ ಮುಂದೆ ಬಿಎಸ್ ವೈ ವಿಚಾರಣೆಗೆ ಹಾಜರಾಗಿದ್ದಾರೆ.
Key words: POCSO, case, BSY, attend, hearing