ಬೆಂಗಳೂರು, ಜೂನ್ 25,2024 (www.justkannada.in): 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದ್ದು ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಹಿಂದೆ ಜೂನ್ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.
ಸರ್ಕಾರ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಯಿತು ಎಂದು ತಿಳಿಸಿದರು.
ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.
ಹಾಲಿನ ದರ ಏರಿಕೆ ಕುರಿತು ಯಾವುದೇ ಮಾಹಿತಿ ಇಲ್ಲ. ದರ ಏರಿಕೆ ಕುರಿತು ಕೆ.ಎಂ. ಎಫ್. ತೀರ್ಮಾನಿಸುತ್ತದೆ. ನೆರೆಯ ರಾಜ್ಯಗಳ ದರಕ್ಕೆ ಅನುಗುಣವಾಗಿ ಏರಿಕೆ ಮಾಡಲು ತೀರ್ಮಾನಿಸಿರಬಹುದು. ಈ ಬಗ್ಗೆ ಕೂಡಲೇ ಮಾಹಿತಿ ಪಡೆಯುವುದಾಗಿ ತಿಳಿಸಿದರು.
ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್ ಅಹ್ಮದ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Key words: All India Kannada Sahitya Sammelan, CM, Siddaramaiah