ಮೈಸೂರು,ಜುಲೈ,24,2024 (www.justkannada.in): ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಮೈಸೂರಿನಲ್ಲಿ ಕೆಪಿಸಿಸಿ ಮಹಿಳಾ ಘಟಕದಿಂದ ಪ್ರತಿಭಟನೆ ನಡೆಯಿತು.
ಮೈಸೂರಿನ ಕಾಂಗ್ರೆಸ್ ಕಚೇರಿ ಮುಂಭಾಗ ಕೆಪಿಸಿಸಿ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಡಾ. ಪುಷ್ಪ ಅಮರನಾಥ್ ನೇತೃತ್ವದಲ್ಲಿ ಖಾಲಿ ಚೊಂಬು ಪ್ರದರ್ಶನ ಮಾಡುವ ಮೂಲಕ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಪ್ಲೇ ಕಾರ್ಡ್, ಖಾಲಿ ಚೊಂಬು ಹಿಡಿದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪುಷ್ಪಅಮರನಾಥ್, ರಾಜ್ಯಕ್ಕೆ ಅನುದಾನ ತರುವಂತ ನಿಟ್ಟಿನಲ್ಲಿ ರಾಜ್ಯದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ. ಬಿಜೆಪಿ, ಜೆಡಿಎಸ್ ಸಂಸದರು ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ. ಈ ಹಿಂದಿನಿಂದಲೂ ರಾಜ್ಯಕ್ಕೆ ಅನುದಾನ ವಿಚಾರದಲ್ಲಿ ಅನ್ಯಾಯವಾಗುತ್ತಿದೆ. ಕೆಪಿಸಿಸಿ ಮಹಿಳಾ ಘಟಕ ಇದನ್ನ ಖಂಡಿಸುತ್ತದೆ. ಕಾಂಗ್ರೆಸ್ ಸಂಸದರು ಕೂಡ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಅನ್ಯಾಯವಾದಾಗ ಕಾಂಗ್ರೆಸ್ ಸಂಸದರು ಪ್ರತಿಭಟಿಸುವುದನ್ನು ಹಿಂದೆಯೂ ಮಾಡಿದ್ದಾರೆ, ಮುಂದೆಯೂ ಮಾಡುತ್ತಾರೆ ಎಂದರು.
ಗೃಹಲಕ್ಷ್ಮಿ ಯೋಜನೆ ಹಣ ಸ್ಥಗಿತ ವಿಚಾರ ಕುರಿತು ಪ್ರತಿಕ್ರಿಯಿಸಿದ ಪುಷ್ಪ ಅಮರನಾಥ್, ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆಯುವ ನಾಯಕ. ಹಂತ ಹಂತದಲ್ಲಿ ಎಲ್ಲರಿಗೂ ಹಣ ತಲುಪುತ್ತದೆ. ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆ ಸ್ಥಗಿತಗೊಳ್ಳಲ್ಲ. ಕೆಲ ಸಣ್ಣ ಪುಟ್ಟ ತಾಂತ್ರಿಕ ದೋಷಗಳು ಇವೆ. ಈ ತಾಂತ್ರಿಕ ದೋಷಗಳನ್ನ ಸರಿಪಡಿಸುವ ಕೆಲಸ ಆಗುತ್ತಿದೆ. ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತದೆ ಎಂದು ಸ್ಪಷ್ಟನೆ ನೀಡಿದರು.
Key words: central budget, Protest, KPCC women’s unit, mysore