ರಾಜ್ಯ ಸರ್ಕಾರಿ ನೌಕರರಿಗೆ ಆ.17ರಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ

ಬೆಂಗಳೂರು,ಆಗಸ್,17,2024 (www.justkannada.in): ರಾಜ್ಯ ಸರ್ಕಾರಿ ನೌಕರರಿಗೆ ಆಗಸ್ಟ್ 17ರಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಆಗಸ್ಟ್ 17ರಂದು ನಗರದ ಅರಮನೆ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೃತಜ್ಞತೆ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ  ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಾಗಾರ  ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗಲೆಂದು  ರಾಜ್ಯ ಸರ್ಕಾರಿ ನೌಕರರಿಗೆ ಅಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ  ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ. ಬಿ ಸುತ್ತೋಲೆ ಹೊರಡಿಸಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು ಎಂದು  ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಅಲ್ಲದೆ  ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಥವಾ ಅವರಿಂದ ನಾಮನಿರ್ದೇಶನ ಹೊಂದಿದ ಅಧಿಕಾರಿಗಳಿಂದ ಪಡೆದು ಒದಗಿಸಬೇಕು ಎಂದು ಷರತ್ತು ವಿಧಿಸಲಾಗಿದೆ.

Key words: special casual leave, August 17, state government employees