ಬಿಜೆಪಿಗೆ ಬದ್ಧತೆ ಇದ್ದರೆ ಮೀಸಲಾತಿ ಪ್ರಮಾಣ ಶೇ. 50ರಿಂದ ಶೇ.75ಕ್ಕೆ ಹೆಚ್ಚಿಸಲು ಕೇಂದ್ರದ ಮೇಲೆ ಒತ್ತಡ ಹೇರಲಿ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಸೆಪ್ಟಂಬರ್,12,2024 (www.justkannada.in): ಬಿಜೆಪಿ ನಾಯಕರಿಗೆ ಮೀಸಲಾತಿ ಬಗ್ಗೆ ಅಷ್ಟೊಂದು ಕಾಳಜಿ-ಬದ್ಧತೆ ಇದ್ದರೆ ಮೀಸಲಾತಿಯ ಪ್ರಮಾಣವನ್ನು ಈಗಿನ ಶೇಕಡಾ 50ರಿಂದ ಶೇಕಡಾ 75ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಹೇಳಿರುವುದಿಷ್ಟು…

ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ಬಿಜೆಪಿ ನಾಯಕರು ಮಾಡುವ ಪ್ರತಿಭಟನೆ, ‘‘ಪ್ರಾಣಿ ಹಿಂಸೆ ವಿರುದ್ಧ ಕಟುಕರು ಪ್ರತಿಭಟನೆ ಮಾಡಿದಂತೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮೀಸಲಾತಿ ವಿರೋಧವನ್ನು ರಕ್ತಗತವಾಗಿಸಿಕೊಂಡಿರುವ ಬಿಜೆಪಿ ನಾಯಕರಿಗೆ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಅರ್ಥಮಾಡಿಕೊಳ್ಳುವ ಜ್ಞಾನವಾಗಲಿ, ವ್ಯವಧಾನವಾಗಲಿ ಇಲ್ಲದಿರುವುದು ಆಶ್ಚರ್ಯವೇನಲ್ಲ. ವಿದ್ಯೆ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸರ್ವರಿಗೂ ಸಮಾನ ಪಾಲನ್ನು ನೀಡುವುದೇ ಮೀಸಲಾತಿಯ ಮೂಲ ಉದ್ದೇಶ. ಆ ಉದ್ದೇಶ ಸಾಧನೆಯಾದ ನಂತರ ಮೀಸಲಾತಿ ಯಾಕೆ ಬೇಕು? ಇದನ್ನು ರಾಹುಲ್ ಗಾಂಧಿಯವರು ಮಾತ್ರ ಅಲ್ಲ ನಾನೂ ಹೇಳುತ್ತೇನೆ. ಇದು ಹೇಗೆ ಮೀಸಲಾತಿ ವಿರೋಧಿ ಹೇಳಿಕೆ ಆಗುತ್ತದೆ? ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರಿಗೆ, ಸಂವಿಧಾನವನ್ನೇ ಬದಲಾಯಿಸಲು ಹೊರಟವರಿಗೆ ಇಂತಹ ಪ್ರತಿಭಟನೆ ಮಾಡುವ ಯಾವ ನೈತಿಕತೆ ಇದೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸರ್ವರಿಗೂ ಶಿಕ್ಷಣ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸಮಾನ ಪಾಲು ಸಿಗಬೇಕೆಂಬ ಉದ್ದೇಶದಿಂದಲೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿ ನೀತಿಯನ್ನು ಸಂವಿಧಾನದಲ್ಲಿ ಅಳವಡಿಸಿದ್ದರು. ಆದರೆ ಮೀಸಲಾತಿಯ ಹೊರತಾಗಿಯೂ ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ಜಾತಿಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಸಮಾನ ಅವಕಾಶ ಇನ್ನೂ ಸಿಕ್ಕಿಲ್ಲ, ಸಾಮಾಜಿಕ ಅಸಮಾನತೆ ಕಡಿಮೆಯಾಗಿಲ್ಲ. ಇದಕ್ಕೆ ಬಿಜೆಪಿ ನಾಯಕರಂತಹ ಜಾತಿ ಪಟ್ಟಭದ್ರರು ಕಾರಣ ಎನ್ನುವುದು ಗೋಡೆ ಬರಹದಷ್ಟು ಸ್ಪಷ್ಟ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಬಿಜೆಪಿಯ ಮಾತೃ ಸಂಸ್ಥೆಯಾದ ಆರ್ ಎಸ್ ಎಸ್ ಹುಟ್ಟಿನಿಂದಲೆ ವರ್ಣವ್ಯವಸ್ಥೆಯನ್ನು ಸಮರ್ಥಿಸಿಕೊಂಡು ಬಂದಿರುವುದಕ್ಕೆ ಇತಿಹಾಸವೇ ಸಾಕ್ಷಿ. ಸಾಮಾಜಿಕ ನ್ಯಾಯದಾನದ ಅವಕಾಶಗಳು ತೆರೆದುಕೊಂಡಾಗೆಲ್ಲ ಅದರ ವಿರುದ್ಧ ಹೋರಾಟ ನಡೆಸಿರುವುದು ಬಿಜೆಪಿ.  ಕರ್ನಾಟಕದ ಸ್ಥಳೀಯ ಸಂಸ್ಥೆಗಳಲ್ಲಿನ ಮೀಸಲಾತಿಯನ್ನು ವಿರೋಧಿಸಿ ದಿವಂಗತ ನ್ಯಾ.ರಾಮ ಜೋಯಿಸ್‌ ರಿಂದ ಸುಪ್ರೀಂ ಕೋರ್ಟ್ ಗೆ ಕಟ್ಲೆ ಹಾಕಿಸಿದ್ದ ಬಿಜೆಪಿ ದೇಶದ ಪ್ರತಿಯೊಂದು ರಾಜ್ಯದಲ್ಲಿಯೂ ಮೀಸಲಾತಿಯನ್ನು ವಿರೋಧಿಸಿ ಚಳುವಳಿ ನಡೆಸಿದೆ.

ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರು ಮಂಡಲ್ ವರದಿ ಜಾರಿಗೊಳಿಸಿದ್ದಾಗ ಅಮಾಯಕ ವಿದ್ಯಾರ್ಥಿಗಳಿಗೆ ಬೆಂಕಿ ಹಚ್ಚಿ ಹಿಂಸಾಚಾರಕ್ಕೆ ಪ್ರಚೋದಿಸಿದ್ದ ಬಿಜೆಪಿ, ಮಂಡಲ್ ವರದಿಗೆ ವಿರುದ್ಧವಾಗಿ ಕಮಂಡಲ ಚಳವಳಿಗೆ ಚಾಲನೆ ನೀಡಿ ಜನರ ತಲೆಯಲ್ಲಿ ಧರ್ಮದ ಅಫೀಮು ತುಂಬುವ ಪ್ರಯತ್ನ ಮಾಡಿತ್ತು. ಕೋಮುವಾದದ ಗುರಿ ಕೇವಲ ಅಲ್ಪಸಂಖ್ಯಾತರಲ್ಲ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯದ ನಾಶವೂ ಅದರ ಗುರಿಯಾಗಿದೆ ಎಂದು ಕಿಡಿಕಾರಿದ್ದಾರೆ.

ಮೀಸಲಾತಿಯನ್ನು ನೇರವಾಗಿ ವಿರೋಧಿಸುವ ದಮ್ಮ-ತಾಕತ್ತು ಇಂದಿನ ಬಿಜೆಪಿ ನಾಯಕರಿಗೆ ಇಲ್ಲ.

ಮೀಸಲಾತಿ ಫಲಾನುಭವಿಗಳಲ್ಲಿನ ಜಾಗೃತಿಯಿಂದಾಗಿ ಮೀಸಲಾತಿಯನ್ನು ನೇರವಾಗಿ ವಿರೋಧಿಸುವ ದಮ್ಮ-ತಾಕತ್ತು ಇಂದಿನ  ಬಿಜೆಪಿ ನಾಯಕರಿಗೆ ಇಲ್ಲ. ಇದಕ್ಕಾಗಿ ಒಂದೆಡೆ ಮೀಸಲಾತಿಗೆ ಕಾನೂನಿನ ರಕ್ಷಣೆ ನೀಡಿರುವ ಸಂವಿಧಾನವನ್ನೇ ಬದಲಾಯಿಸುವ ಪ್ರಯತ್ನ ಮಾಡಿದರೆ ಇನ್ನೊಂದೆಡೆ ಮೀಸಲಾತಿ ಫಲಾನುಭವಿಗಳ ನಡುವೆಯೆ ಅಂತಃಕಲಹ ಏರ್ಪಡಿಸಿ ಸಾಮಾಜಿಕ ನ್ಯಾಯದ ಅಸ್ತ್ರವನ್ನು ಮೊಂಡಾಗಿಸುವ ಪ್ರಯತ್ನ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ಮೀಸಲಾತಿಯ ಫಲಾನುಭವಿಗಳಾದ ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ ಸಮುದಾಯ ಇಂದು ಜಾಗೃತವಾಗಿದೆ. ಯಾರು ತಮ್ಮ ಶತ್ರುಗಳು ಮತ್ತು ಮಿತ್ರರು ಎನ್ನುವುದನ್ನು ಅವರು ಅರಿತುಕೊಂಡಿದ್ದಾರೆ. ಮೀಸಲಾತಿ ವಿರೋಧವನ್ನು ಅಂತರ್ಯದಲ್ಲಿ ಅಡಗಿಸಿಕೊಂಡು ಬಹಿರಂಗವಾಗಿ ಮೀಸಲಾತಿ ಪರ ಘೋಷಣೆ ಕೂಗಿದರೆ ನಂಬುವಷ್ಟು ನಮ್ಮ ಜನ ದಡ್ಡರಲ್ಲ. ಮೀಸಲಾತಿಯೂ ಸೇರಿದಂತೆ ಸಾಮಾಜಿಕ ನ್ಯಾಯದಾನದ ಅವಕಾಶಗಳನ್ನು ಕಾಲಕಾಲಕ್ಕೆ ಹೇಗೆ ಬಿಜೆಪಿ ಮತ್ತು ಸಂಘ ಪರಿವಾರ ಚಿವುಟಿಹಾಕಿದೆ ಎನ್ನುವುದನ್ನು ನಮ್ಮ ಜನ ನೋಡಿ, ಅನುಭವಿಸಿ ತಿಳಿದುಕೊಂಡಿದ್ದಾರೆ. ನಿಮ್ಮ ಹುಸಿ ಸಾಮಾಜಿಕ ನ್ಯಾಯದ ಘೋಷಣೆಗೆ ಅವರು ಮರುಳಾಗುವವರಲ್ಲ.

ಸಮಾನ ಅವಕಾಶ ಸಿಕ್ಕಿದೆಯೇ, ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಲಿಕ್ಕಾಗಿಯೇ ಸುಪ್ರೀಂ ಕೋರ್ಟ್ ಜಾತಿ ಆಧಾರದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಬೇಕೆಂದು ಹೇಳಿದ್ದು. ಅದನ್ನು ನಮ್ಮ ಸರ್ಕಾರ ಕರ್ನಾಟಕದಲ್ಲಿ ಮಾಡಿ ತೋರಿಸಿದೆ. ಬಿಜೆಪಿ ನಾಯಕರಿಗೆ ಮತ್ತು ಕೇಂದ್ರದಲ್ಲಿರುವ ಅವರ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಮೊದಲು ಜಾತಿಗಣತಿಯನ್ನು ಶೀಘ್ರವಾಗಿ ದೇಶಾದ್ಯಂತ ನಡೆಸಿ ಮುಗಿಸಲಿ. ಮೀಸಲಾತಿ ಸಮಾಜದ ಕಟ್ಟಕಡೆಯ ಮನುಷ್ಯನನ್ನು ತಲುಪಿದೆಯೇ ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಲು ಇದು ಅವಶ್ಯಕವಾಗಿದೆ.

ಮೀಸಲಾತಿ ಪ್ರಮಾಣವನ್ನು ಈಗಿನ ಶೇಕಡಾ 50ರಿಂದ ಶೇಕಡಾ 75ಕ್ಕೆ ಹೆಚ್ಚಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಬಹಿರಂಗ ಸಭೆಗಳಲ್ಲಿ ಮಾತ್ರವಲ್ಲ ಲೋಕಸಭೆಯಲ್ಲಿಯೂ ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: BJP, reservation, pressure, Center, CM Siddaramaiah