ಕೇಂದ್ರದಿಂದ ತೆರಿಗೆ ಅನ್ಯಾಯ: ಹೋರಾಟಕ್ಕೆ ಕನ್ನಡಿಗರೆಲ್ಲರೂ ದನಿ ಎತ್ತಬೇಕು- ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು,ಅಕ್ಟೋಬರ್,12,2024 (www.justkannada.in):  ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ತೆರಿಗೆ ವಿಚಾರದಲ್ಲಿ ಅನ್ಯಾಯವಾಗುತ್ತಿದ್ದು, ಈ ಅನ್ಯಾಯದ ವಿರುದ್ದ ಹೋರಾಟಕ್ಕೆ ಕನ್ನಡಿಗರೆಲ್ಲರೂ ದನಿ ಎತ್ತಬೇಕು ಎಂದು  ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ , ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧದ ಹೋರಾಟಕ್ಕೆ ಕನ್ನಡಿಗರೆಲ್ಲರೂ ದನಿ ಎತ್ತಬೇಕಾಗಿದೆ. ಕೇಂದ್ರದ ಎನ್​​ಡಿಎ ಸರ್ಕಾರ ಕರ್ನಾಟಕ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡುತ್ತಾ ಬಂದಿರುವ ಅನ್ಯಾಯಕ್ಕೆ ಇತ್ತೀಚಿನ ತೆರಿಗೆ ಪಾಲಿನ ಹಂಚಿಕೆಯ ವಿವರಗಳೇ ಸಾಕ್ಷಿ ಎಂದು ಹೇಳಿದ್ದಾರೆ.

28 ರಾಜ್ಯಗಳಿಗೆ ಒಟ್ಟು 1,78,193 ಕೋಟಿ ರೂಪಾಯಿ ಬಿಡುಗಡೆಗೊಳಿಸಿರುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ನೀಡಿರುವುದು ಕೇವಲ 6,498 ಕೋಟಿ ರೂಪಾಯಿ. ಈ ಅನ್ಯಾಯದ ವಿರುದ್ಧ ಜಾತಿ-ಧರ್ಮ, ಪಕ್ಷ – ಪಂಥದ ಭೇದವಿಲ್ಲದೆ ದನಿ ಎತ್ತುವ ಶಪಥವನ್ನು ಪ್ರತಿಯೊಬ್ಬ ಕನ್ನಡಿಗನೂ ಮಾಡಬೇಕಾಗಿದೆ. ಇಂತಹದ್ದೊಂದು ಪ್ರಮಾಣ ವಚನ ಸ್ವೀಕಾರಕ್ಕೆ ಅನ್ಯಾಯದ ವಿರುದ್ಧ ನ್ಯಾಯದ ಗೆಲುವಿನ ಸಂಕೇತವಾದ ವಿಜಯದಶಮಿಯ ಶುಭ ದಿನ ಸಾಕ್ಷಿಯಾಗಲಿ ಎಂದು ಹೇಳಿದ್ದಾರೆ.

ಕರ್ನಾಟಕವನ್ನು ಕಡೆಗಣಿಸುವಂತಹ ಅನ್ಯಾಯವನ್ನು ನಾವೇನು ಮಾಡಿದ್ದೇವೆ? ಎಂದು ಪ್ರತಿಯೊಬ್ಬ ಸ್ವಾಭಿಮಾನಿ ಕನ್ನಡಿಗನೂ ಕೇಂದ್ರ ಸರ್ಕಾರವನ್ನು ಕೇಳಬೇಕಾಗಿದೆ. ಬಿಮಾರು ರಾಜ್ಯಗಳೆಂದೇ ಕುಖ್ಯಾತಿ ಪಡೆದಿರುವ ರಾಜ್ಯಗಳಾದ ಉತ್ತರಪ್ರದೇಶಕ್ಕೆ 31,962 ಕೋಟಿ ರೂ, ಬಿಹಾರಕ್ಕೆ 17,921 ಕೋಟಿ ರೂ, ಮಧ್ಯಪ್ರದೇಶಕ್ಕೆ 13,987 ಕೋಟಿ ರೂ. ಮತ್ತು ರಾಜಸ್ಥಾನಕ್ಕೆ 10,737 ಕೋಟಿ ರೂಪಾಯಿಯಷ್ಟು ತೆರಿಗೆ ಪಾಲನ್ನು ನೀಡಲಾಗಿದೆ. ದುರಾಡಳಿತ ಮತ್ತು ಭ್ರಷ್ಟಾಚಾರದಿಂದಾಗಿ ಅಭಿವೃದ್ಧಿ ಪಥದಲ್ಲಿ ಹಿಮ್ಮುಖವಾಗಿ ಸಾಗುತ್ತಿರುವ ಈ ರಾಜ್ಯಗಳಿಗಾಗಿ ಕನ್ನಡಿಗನ ಬೆವರ ಗಳಿಕೆ ಯಾಕೆ ಪೋಲಾಗಬೇಕು ಎನ್ನುವುದು ನಮ್ಮ ಪ್ರಶ್ನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Key words: Tax, injustice, Centre, fight, CM Siddaramaiah