ಬೆಂಗಳೂರು,ಡಿಸೆಂಬರ್,21,2024 (www.justkannada.in): ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರಿಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಅವಾಚ್ಯ ಮತ್ತು ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿರುವ ಘಟನೆ ವರದಿಯಾಗಿದ್ದು ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೋರಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದೆ.
ಸಭಾಪತಿಗೆ ಪತ್ರ ಬರೆದಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು, ದಿನಾಂಕ 19.12.2024ರಂದು ಬೆಳಗಾವಿಯ ಚಳಿಗಾಲದ ಅಧಿವೇಶನ ನಡೆಯುತ್ತಿದ್ದ ಸುವರ್ಣ ಸೌಧದ ವಿಧಾನ ಪರಿಷತ್ ಕಲಾಪದಲ್ಲಿ ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಅವರಿಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಅಸಭ್ಯ ಮತ್ತು ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಕರ್ನಾಟಕ ಸರ್ಕಾರದ ಮಾಜಿ ಮಂತ್ರಿಗಳಾಗಿದ್ದು ಹೆಣ್ಣು ಮಕ್ಕಳ ಬಗ್ಗೆ ಅಪಾರ ಕಾಳಜಿ, ಗೌರವ ಹೊಂದಿರಬೇಕಾದ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿಯೇ ಘನತೆವೆತ್ತ ಸದನದಲ್ಲಿ ಮಹಿಳಾ ಮಂತ್ರಿಯೊಬ್ಬರನ್ನು ಅತೀ ಕೀಳು ಮಟ್ಟದ ಅಸಾಂವಿಧಾನಿಕ ಪದ ಪ್ರಯೋಗ ಮಾಡಿದ್ದರೆ ಅದು ನಾಡಿನ ಹೆಣ್ಣು ಕುಲಕ್ಕೇ, ಅವರ ಭಾವನೆಗಳಿಗೆ, ಅವರ ಘನತೆಗೆ ಉಂಟು ಮಾಡಿರುವ ಅಪಮಾನವಾಗುತ್ತದೆ. ಹಾಗಾಗಿ ತಾವುಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಪತ್ರದಲ್ಲಿ ಡಾ. ನಾಗಲಕ್ಷ್ಮೀ ಚೌಧರಿ ಅವರು ಮನವಿ ಮಾಡಿದ್ದಾರೆ.
Key words: CT Ravi, case, State Women Commission, high-level, investigation