ಬೆಂಗಳೂರು,ಫೆಬ್ರವರಿ,7,2025 (www.justkannada.in): ಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲಿ ಕಂಡುಬರುತ್ತಿರುವ ಹಠಾತ್ ಹೃದಯಾಘಾತ, ಸಾವು ಪ್ರಕರಣಗಳ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸುವುದಕ್ಕೆ ತಜ್ಞರ ಸಮಿತಿಯೊಂದನ್ನು ರಚಿಸಲು ಮುಂದಾಗಿದೆ.
ಈ ಬಗ್ಗೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ತಮ್ಮ ಇ-ಮೇಲ್ ಮೂಲಕ ಇತ್ತೀಚಿಗೆ ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವುದು ದಿನಪತ್ರಿಕೆಗಳಲ್ಲಿ ವರದಿಯಾಗುತ್ತಿದ್ದು, ಪ್ರತಿ ಸಾವು ಅವರ ಅವಲಂಬಿತ ಕುಟುಂಬಗಳನ್ನು ಆರ್ಥಿಕ-ಸಾಮಾಜಿಕ ಸಮಸ್ಯೆಗಳಿಗೆ ತಳ್ಳುತ್ತಿದೆ ಎಂದು ತಿಳಿಸಿರುತ್ತಾರೆ. ಈ ಸಾವುಗಳು ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳ ಕಾರಣಕ್ಕೆ ಸಂಭವಿಸುತ್ತಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಆದ್ದರಿಂದ, ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಇಂತಹ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರಿದ್ದಾರೆ.
ಆದ್ದರಿಂದ, ಇಂತಹ ಹಠಾತ್ ಸಾವುಗಳ ಕುರಿತಂತೆ ಹಾಗೂ ಮುಂದೆ ಈ ರೀತಿಯ ಸಾವುಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ಒಂದು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸಿ, ವರದಿ ಪಡೆದು, ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
Key words: Sudden deaths, young people, CM Siddaramaiah, expert committee