ಬೆಂಗಳೂರು,ಫೆಬ್ರವರಿ,17,2025 (www.justkannada.in): ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು ಚಿಕ್ಕಿ ವಿತರಣೆಗೆ ನಿರ್ಬಂಧ ವಿಧಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಶೇಷಾಧಿಕಾರಿ ಮತ್ತು ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ (ಯೋಜನೆ) ವೈ ಸಿ ರವಿಕುಮಾರ್ ಅವರು, 2022-23ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಮಧ್ಯಾಹ್ನ ಉಪಹಾರ ಯೋಜನೆ) ರಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 1 ರಿಂದ 8ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 46 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣು/ಚಿಕ್ಕಿಯನ್ನು ವಿತರಿಸಲು ಆದೇಶಿಸಲಾಗಿತ್ತು.
ಆದರೆ ಶಾಲಾ ಶಿಕ್ಷಣ ಇಲಾಖೆ, ಕಲಬುರಗಿಯ ಅಪರ ಆಯುಕ್ತರು ಪತ್ರ ಬರೆದಿದ್ದು, ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮಕ್ಕಳಿಗೆ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ ಎನ್ನಬಹುದಾದಂತಹ ಅಪರ್ಯಾಪ್ತ ಕೊಬ್ಬಿನಾಂಶ ಹೆಚ್ಚಿಗೆ ಇದ್ದು, ಇದರಲ್ಲಿನ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದಿದ್ದಲ್ಲಿ ಕಲುಷಿತವಾಗಿ ಮಕ್ಕಳ ಆರೋಗ್ಯಕ್ಕೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿ, ಮೊಟ್ಟೆ ಅಥವಾ ಬಾಳೆಹಣ್ಣು ಮಾತ್ರ ವಿತರಿಸಲು ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದರು.
ಹಾಗೆಯೇ ಶಾಲಾ ಶಿಕ್ಷಣ ಇಲಾಖೆ, ಧಾರವಾಡ ಅಪರ ಆಯುಕ್ತರು, ಇವರ ಬರೆದ ಪತ್ರದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ ಬದಲಾಗಿ ಶಾಲೆಗಳಲ್ಲಿ ವಿತರಣೆ ಮಾಡಲಾಗುತ್ತಿರುವ ಚಿಕ್ಕಿಯು ನಿಗದಿತ ಪ್ರಮಾಣದಲ್ಲಿ ಇಲ್ಲದಿರುವುದು, ಸಮರ್ಪಕವಾಗಿ ಸಂಗ್ರಹಿಸದೇ ಇರುವುದು ಹಾಗೂ ಅವಧಿ ಮೀರಿದ ಚಿಕ್ಕಿಗಳನ್ನು ಸಂಗ್ರಹಿಸಿ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವುದು ಕಂಡು ಬಂದಿರುವುದರಿಂದ ಹಾಗೂ ಅಂತಹ ಚಿಕ್ಕಿಗಳನ್ನು ಸೇವಿಸಿದಲ್ಲಿ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ಮಾತ್ರ ವಿತರಿಸುವ ಕುರಿತು ಕ್ರಮವಹಿಸುವಂತೆ ಕೋರಿದ್ದರು.
ಈ ಅಂಶಗಳನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಿ ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಲು ಅನುಮತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
Key words: Government School children, eggs, bananas, Restrictions, chikki