ಮೈಸೂರು ಮಾರ್ಚ್,28,2025 (www.justkannada.in): ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಪಡುವಾರಳ್ಳಿಯಲ್ಲಿರುವ ಬಾಬು ಜಗಜೀವನ ರಾಮ್ ಭವನ ಸಭಾಂಗಣದಲ್ಲಿ ಶುಕ್ರವಾರ (ಮಾ. 28ರಂದು) ನಡೆದ ಎಸ್.ಸಿ-ಎಸ್.ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ (ದೌರ್ಜನ್ಯ ತಡೆ) ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸಂಬಂಧ ಇರುವ ಪ್ರಕರಣಗಳ ಬಗ್ಗೆ ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಆಗಮಿಸಬೇಕು ಹಾಗೂ ಆ ಸಮಸ್ಯೆ ಸಂಬಂಧ ಬಗೆಹರಿಸಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೂಚಿಸಿದರು. ತಾತ್ಸಾರದ ಮನೋಭಾವನೆಯಿಂದ ಕೆಲಸ ನಿರ್ವಹಿಸಿದರೆ ಅಂತಹ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅನುಸೂಚಿತ ಜಾತಿ, ಪಂಗಡಗಳ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಎಸ್ .ಸಿ ಹಾಗೂ ಎಸ್.ಟಿ. ಸಮುದಾಯದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಸಮಿತಿಯು ಸದಸ್ಯರನ್ನು ಠಾಣೆ ವ್ಯಾಪ್ತಿಯ ಪ.ಜಾತಿ ಹಾಗೂ ಪ.ಪಂಗಡಗಳ ಕುಂದು ಕೊರತೆಗಳ ಸಭೆಗೆ ಆಹ್ವಾನಿಸಿ ಇದರಿಂದ ಸ್ಥಳೀಯವಾಗಿ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನದಲ್ಲಿ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನಗಳ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಿರ್ವಹಣಾ ಸಮಿತಿಯ ಮೂಲಕ ಸಮರ್ಪಕವಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮೈಸೂರು ನಗರದಲ್ಲಿ ಅಕ್ರಮ ಮದ್ಯ ಮಾರಾಟ ಬಗ್ಗೆ ದೂರುಗಳು ಬಂದರೆ ಅಬಕಾರಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾನೂನು ರೀತಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಜನರ ಮೇಲೆ ಹಲ್ಲೆ, ದೌರ್ಜನ್ಯಗಳು ನಡೆದರೆ ತಕ್ಷಣವೇ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಹಾಗೂ ಪ್ರತಿ ಪೊಲೀಸ್ ಠಾಣೆಯಲ್ಲಿಯೂ ಕುಂದು ಕೊರತೆ ಸಭೆ ನಡೆಸಲಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಂಗೇಗೌಡ ಅವರು ಅನುಸೂಚಿತ ಜಾತಿ/ಅನುಸೂಚಿತ ಪಂಗಡ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆ ನಿರ್ವಹಿಸಿದರು.
ಸಭೆಯಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಹಾಗೂ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
Key words: SC-ST atrocities case, Mysore, DC, G. LakshmikanthaReddy