ಮೈಸೂರು ಏಪ್ರಿಲ್, 28,2025 (www.justkannada.in): ಮೇ 4ರಂದು ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ‘ನೀಟ್’ (ಯುಜಿ) ಪರೀಕ್ಷೆ ನಡೆಯಲಿದ್ದು, ಯಾವುದೇ ಲೋಪ ಆಗದಂತೆ ಸುಗಮವಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನೀಟ್ ಪರೀಕ್ಷೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿಸಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ಜಿಲ್ಲೆಯಲ್ಲಿ 20 ಪರೀಕ್ಷಾ ಕೇಂದ್ರಗಳಲ್ಲಿ 7,709 ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಲಿದ್ದು ನೀಟ್ ಪರೀಕ್ಷೆ ಸುಗಮವಾಗಿ, ನ್ಯಾಯಯುತ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವವರಿಗೆ ನೀಟ್ ಪರೀಕ್ಷೆ ನಡೆಸಲಾಗುತ್ತದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಪರೀಕ್ಷೆ ನಡೆಸುತ್ತಿದ್ದು ಅವರು ನೀಡುವ ಗೈಡ್ ಲೈನ್ಸ್ ಗಳ ಪ್ರಕಾರ ನೇಮಕವಾಗಿರುವ ಅಧಿಕಾರಿಗಳು ಕಾರ್ಯ ನಿರ್ವಹಿಸುವಂತೆ ಸಭೆಯಲ್ಲಿ ತಿಳಿಸಿದರು.
ಪ್ರತಿ ಪರೀಕ್ಷಾ ಕೇಂದ್ರಕ್ಕೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವಂತೆ ಸಭೆಯಲ್ಲಿ ತಿಳಿಸಿದರು. ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಪರೀಕ್ಷೆ ಯಾವುದೇ ಲೋಪಗಳು ಆಗದಂತೆ ನೇಮಕವಾದ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ನೂತನ್ ಪುಂಜ್ ಹಾಗೂ ಮಿತಿಲೇಶ್ ಕುಮಾರ್ ಹಾಗೂ ಕಾಲೇಜಿನ ಪ್ರಾಂಶುಪಾಲರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Key words: ‘NEET’ exam, 20 exam centres, Mysuru district, DC Laxmikantha Reddy