ಕಲಬುರಗಿ, ಫೆಬ್ರವರಿ 08, 2020 (www.justkannada.in): ಮುಖ್ಯಮಂತ್ರಿ ಯಡಿಯೂರಪ್ಪ ಖಾತೆ ಹಂಚಲಾರದಷ್ಟು ಅಸಮರ್ಥರಾಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಒಂದೇ ಅಲ್ಲದೆ ಖಾತೆ ಹಂಚಿಕೆಗೂ ಹೈಕಮಾಂಡ್ ಮೇಲೆ ಅವಲಂಬಿತರಾಗಿದ್ದಾರೆ. ಪ್ರತಿಯೊಂದಕ್ಕೂ ಹೈಕಮಾಂಡ್ ಎಂದು ಹೇಳುತ್ತಾರೆ ಎಂದು ಬಿಎಸ್ ವೈ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಮುಖ್ಯಮಂತ್ರಿಯಾಗಿ ಯಾವುದೇ ಸ್ವಾತಂತ್ರ್ಯವಿಲ್ಲ. ಕಲ್ಯಾಣ ಕರ್ನಾಟಕ ಸೇರಿದಂತೆ 13 ಜಿಲ್ಲೆಗಳಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ಸಾಮಾಜಿಕ ಸಮಾನತೆ ಕಾಪಾಡಲಾಗಿಲ್ಲ. ಇದರಿಂದ ಅಸಮಾಧಾನ ಹೆಚ್ಚಾಗುತ್ತದೆ ಎಂದಿದ್ದಾರೆ.
ಸರ್ಕಾರದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು. ಕೇಂದ್ರ ಸರ್ಕಾರ ಬಜೆಟ್ನಲ್ಲಿ ರಾಜ್ಯದ ತೆರಿಗೆ ಪಾಲನ್ನು ನೀಡಿಲ್ಲ. ಇದು ಮುಂದಿನ ತಿಂಗಳು ಮಂಡನೆಯಾಗಲಿರುವ ರಾಜ್ಯ ಬಜೆಟ್ ಮೇಲೂ ಪರಿಣಾಮ ಬೀರಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.