ಬೆಂಗಳೂರು,ಜು,25,2020(www.justkannada.in): ಎಲ್ಲಾ ಖಾಸಗಿ ಆಸ್ಪತ್ರೆಗಳು, ನರ್ಸಿಂಗ್ ಹೋಂ ಗಳನ್ನು ರಾಷ್ಟ್ರೀಕರಣ ಮಾಡಿ ಸರ್ಕಾರದ ವಶಕ್ಕೆ ಪಡೆಯುವಂತೆ ಸರ್ಕಾರಕ್ಕೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.
ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್, ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿಲ್ಲ. ಕೊರೋನಾ ಚಿಕಿತ್ಸೆ ಹೆಸರಿನಲ್ಲಿ ರೋಗಿಗಳಿಂದ ದುಪ್ಪಟ್ಟು ದರ ಸುಲಿಗೆ ಮಾಡಲಾಗುತ್ತಿದೆ. ಇದರಿಂದ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ವೈದ್ಯರು ಕಾರ್ಯನಿರ್ವಹಿಸದೆ ಮನೆಯಲ್ಲಿ ಉಳಿಯುವುದು, ಸೈನಿಕರು ಯುದ್ಧ ಕಾಲದಲ್ಲಿ ಶಸ್ತ್ರ ತ್ಯಾಗ ಮಾಡಿದಂತಾಗುತ್ತದೆ. ಈ ಹಿಂದೆ ಸರ್ಕಾರಕ್ಕೆ ಈ ಕುರಿತು ಏಪ್ರಿಲ್ 15 ರಂದೆ ಪತ್ರ ಬರೆಯಲಾಗಿತ್ತು. ಆಗಲೇ ಸರ್ಕಾರ ಎಚ್ಚೆತ್ತುಕೊಂಡಿದ್ದರೆ ಇಂತಹ ಸ್ಥಿತಿ ಬರುತ್ತಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹಾಗೆಯೇ ಖಾಸಗಿ ಬ್ಯಾಂಕ್ ಗಳನ್ನು ರಾಷ್ಟ್ರೀಕರಣ ಮಾಡಿದ ರೀತಿಯಲ್ಲಿ ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂ ಗಳನ್ನು ಸುಗ್ರೀವಾಜ್ಞೆ ಮೂಲಕ ರಾಷ್ಟ್ರೀಕರಣ ಮಾಡಿ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ. ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹವರ ಪ್ರಮಾಣಪತ್ರವನ್ನು ರದ್ದುಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.
Key words: Nationalize – private hospitals- take – government-Kuruburu Shanthakumar -letter.