ಬೆಂಗಳೂರು,ಏಪ್ರಿಲ್,01,2021(www.justkannada.in) : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ನಾನು ಮಾಡುತ್ತಾ ಬಂದಿರುವ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ಧರಾಗಿ ಉಳಿಯಬೇಕು ಎಂದಿದ್ದಾರೆ.
ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.
ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಬಿಜೆಪಿ ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ಬಿಜೆಪಿ ವರಿಷ್ಠರು ಈಶ್ವರಪ್ಪನವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿಗಳ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಕೊರೊನಾ ವೈರಸ್ ಕಾರಣ ಅಲ್ಲ, ಬಿಜೆಪಿ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪನವರು ತನ್ನ ಸಂಶೋಧನೆ ಮೂಲಕ ಬಹಿರಂಗಗೊಳಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.
ನಮ್ಮ ಸರ್ಕಾರ 10% ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮ ಬಿಜೆಪಿ ರಾಜ್ಯ ಸರ್ಕಾರದ ಜಾತಕಪತ್ರವನ್ನು ಪರಿಶೀಲಿಸಿ, ನೀವೇ ರಾಜ್ಯ ಸರ್ಕಾರಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ ಎಂದು ಟೀಕಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, “ನಾ ಖಾವುಂಗಾ, ನಾ ಖಾನೆ ದೂಂಗಾ” ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು “ಮೈ ಬಿ ಖಾವೂಂಗಾ, ತುಮ್ ಬಿ ಖಾವೋ” ಎಂದು ಬದಲಿಸಿ ಬಿಡಿ. ಆಪರೇಷನ್ ಕಮಲ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು, ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ಎಂಬ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಠೀಕರಿಸಿದೆ ಎಂದಿದ್ದಾರೆ.
ರಾಜ್ಯದ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಸಬೇಕು ಎಂದು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.
key words : Ishwarappa-Politics-life-first time-good-job-Former CM-Siddaramaiah