ನಟಿ, ಖ್ಯಾತ ನಿರೂಪಕಿ ಅಪರ್ಣಾ ನಿಧನಕ್ಕೆ ಸಿಎಂ ರಾಜಕೀಯ ಗಣ್ಯರಿಂದ ಸಂತಾಪ

ಬೆಂಗಳೂರು,ಜುಲೈ,12,2024 (www.justkannada.in):  ನಟಿ, ಖ್ಯಾತ ನಿರೂಪಕಿ ಅಪರ್ಣ ವಸ್ತಾರೆ ಅವರು  ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣ ಅವರು  ನಿನ್ನೆ ರಾತ್ರಿ ಬೆಂಗಳೂರಿನ ನಿವಾಸದಲ್ಲಿ ಮೃತಪಟ್ಟಿದ್ದಾರೆ. ನಿರೂಪಕಿ ಅಪರ್ಣಾ ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.

ಸಿನಿಮಾ, ಟಿವಿ, ಸಾಹಿತ್ಯ ಲೋಕ ಸೇರಿದಂತೆ ಹಲವು ದಿಗ್ಗಜರು ಅಪರ್ಣಾ ಸಾವಿನ ಸುದ್ದಿಗೆ ಆಘಾತ ವ್ಯಕ್ತಪಡಿಸಿದ್ದಾರೆ. ಇನ್ನೂ ಅಪರ್ಣಾ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ, ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.

ಮೃತ ಅಪರ್ಣಾರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ

ಡಿಸಿಎಂ ಡಿಕೆ ಶಿವಕುಮಾರ್‌ ಸಂತಾಪ

ಅಪರ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದ, ಖ್ಯಾತ ನಿರೂಪಕಿ, ನಟಿ ಅಪರ್ಣ ಅವರ ಸಾವಿನಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರ ನಿಧನವು ಕಲಾ ಲೋಕಕ್ಕೆ ತುಂಬಲಾರದ ನಷ್ಟ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ ಸಾಂತ್ವನಗಳು ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ: ನಿರೂಪಕಿ ಅಪರ್ಣಾ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಅಪರ್ಣಾ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸರಕಾರಿ ಕಾರ್ಯಕ್ರಮಗಳು, ದೂರದರ್ಶನದಲ್ಲಿ ನಿರೂಪಕಿಯಾಗಿದ್ದ ಅವರು, ಬೆಂಗಳೂರಿನ ಮೆಟ್ರೊದಲ್ಲಿ ಹಿನ್ನೆಲೆ ಧ್ವನಿ ನೀಡಿ ಖ್ಯಾತಿ ಪಡೆದವರು. ‘ಮಸಣದ ಹೂವು’ ಸೇರಿ ಹಲವು ಚಲನಚಿತ್ರಗಳು, ಧಾರವಾಹಿಗಳಲ್ಲೂ ಅವರು ನಟಿಸಿದ್ದರು. ಅವರ ಕುಟುಂಬಸ್ಥರು ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಂತಾಪ.

ಸ್ವಚ್ಛ ಕನ್ನಡದ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ಧಿ ಕೇಳಿ ದಿಗ್ಭ್ರಮೆಯಾಗಿದೆ. ಕನ್ನಡದ‌ ಬೆಳ್ಳಿತೆರೆ, ಕಿರುತೆರೆಯಲ್ಲಿ ನಟಿಸಿದ್ದ ಅಪರ್ಣಾರವರು, ಲಕ್ಷಾಂತರ ಕಾರ್ಯಕ್ರಮಗಳನ್ನು ನಿರೂಪಿಸಿದ್ದರು‌ ಎಂದು ಅಪರ್ಣಾ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು  ಸಂತಾಪ ಸೂಚಿಸಿದ್ದಾರೆ.

ನಾನು ಸಚಿವೆಯಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಲವು ಕಾರ್ಯಕ್ರಮಗಳಿಗೆ ನಿರೂಪಣೆ ಮಾಡಿದ್ದರು. ಆತ್ಮೀಯ ಗೆಳತಿ ಅಪರ್ಣಾ ಅವರ ಅಗಲಿಕೆ ಮನಸ್ಸಿಗೆ ತೀವ್ರ ನೋವನ್ನುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

 

Key words: actor, Aparna, death, CM’s,  political elite, Condolences