ಬೆಂಗಳೂರು, ಮಾರ್ಚ್,11,2024(www.justkannada.in): ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ದ ಕ್ರಮ ಕೈಗೊಳ್ಳುವ ದಮ್ಮು, ತಾಕತ್ತು ಬಿಜೆಪಿಗೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
ಈ ಸಂಬಂಧ) ಮಾಧ್ಯಮ ಪ್ರಕಟಣೆ ಮೂಲಕ ಅನಂತ್ ಕುಮಾರ್ ಹೆಗಡೆ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಆರ್ಎಸ್ಎಸ್ ಬೆಂಬಲದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು, ತಾಕತ್ ಬಿಜೆಪಿಗೆ ಇಲ್ಲ. ಹೆಗಡೆ ಈಗ ಹೇಳಿರುವುದನ್ನೇ ಹಿಂದೆ ಕಾಲಕಾಲಕ್ಕೆ ಆರ್ಎಸ್ಎಸ್ ನಾಯಕರು ಹೇಳಿದ್ದರು. ಹೆಗಡೆ ಒಂದು ಮುಖವಾಡ ಅಷ್ಟೆ, ನಿಜವಾದ ಮುಖ ಆರ್ಎಸ್ಎಸ್. ಬೆಂಬಲ ಇರುವುದರಿಂದ ಬಿಜೆಪಿಯನ್ನೇ ಯಾಕೆ, ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಹೆಗಡೆ ಅವರು ಲೆಕ್ಕಕ್ಕಿಟ್ಟಿಲ್ಲ ಎಂದು ಟಾಂಗ್ ಕೊಟ್ಟರು.
ನರೇಂದ್ರ ಮೋದಿಯವರೂ ಸೇರಿದಂತೆ ಬಿಜೆಪಿ ನಾಯಕರ ಮುಂದೆ ಈಗ ಇರುವುದು ಎರಡೇ ಆಯ್ಕೆ. ಒಂದೋ ಹೆಗಡೆಯನ್ನು ತಕ್ಷಣ ಪಕ್ಷದಿಂದ ವಜಾಗೊಳಿಸಬೇಕು. ಇಲ್ಲವೇ ಅವರ ಹೇಳಿಕೆಗೆ ತಮ್ಮ ಸಹಮತ ಇದೆ ಎಂದು ಘೋಷಿಸಬೇಕು. ನೋಡೋಣ ಇದೇ ವಿಷಯದ ಮೇಲೆ ಈ ಬಾರಿಯ ಲೋಕಸಭಾ ಚುನಾವಣೆ ನಡೆಯಲಿ. ಅನಂತಕುಮಾರ ಹೆಗಡೆ ನಿರಂತರವಾಗಿ ಸಂವಿಧಾನದ ವಿರುದ್ಧ ಮಾತ್ರ ಹೇಳಿಕೆ ನೀಡಿದ್ದಲ್ಲ ಮೀಸಲಾತಿಯನ್ನು ರದ್ದುಗೊಳಿಸಬೇಕೆಂದು ಹೇಳಿದ್ದಾರೆ. ದಲಿತರನ್ನು ನಾಯಿಗಳು ಎಂದು ದೂಷಿಸಿದ್ದಾರೆ. ಮನುಸ್ಮೃತಿಯನ್ನು ಬಹಿರಂಗವಾಗಿ ಸಮರ್ಥಿಸಿದ್ದಾರೆ. ವಿರೋಧ ಪಕ್ಷದ ನಾಯಕರನ್ನು ತುಚ್ಚೀಕರಿಸಿ ಮಾತನಾಡಿದ್ದಾರೆ. ಆಗಲೂ ಬಿಜೆಪಿ ಹೆಗಡೆ ವಿರುದ್ಧ ಕ್ರಮ ಕೈಗೊಂಡಿಲ್ಲ. ಯಾಕೆಂದರೆ ಹೆಗಡೆ ಮಾತುಗಳು ಬಿಜೆಪಿ ಮತ್ತು ಆರ್ಎಸ್ಎಸ್ ನ ಮನದ ಮಾತುಗಳೂ ಆಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
Key words: Ananth kumar hedge-action-BJP-CM-Siddaramaiah