ಬೆಂಗಳೂರು, ಜನವರಿ 31, 2022 (www.justkannada.in): ಜ್ಞಾನಭಾರತಿ ಆವರಣದಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೋಮವಾರ ಬೆಳಿಗ್ಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ನಡೆಯುತ್ತಿದ್ದಂತಹ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಕಾರಣ ಘರ್ಷಣೆ ಉಂಟಾದ ಪ್ರಕರಣ ವರದಿಯಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ವಿದ್ಯಾರ್ಥಿಗಳಿಗೆ ಅಂಕಪಟ್ಟಿಗಳನ್ನು ವಿತರಿಸುವಲ್ಲಿ ಸುಮಾರು ಎರಡು ವರ್ಷಗಳಷ್ಟು ವಿಳಂಬವಾಗಿದೆ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರು ಇಂದು ಬೆಳಿಗ್ಗೆ ಪ್ರತಿಭಟನೆ ನಡೆಸುತ್ತಿದ್ದರು. ಈ ಘಟನೆಯ ಬಗ್ಗೆ ವಿದ್ಯಾರ್ಥಿಗಳು ತಿಳಿಸಿರುವಂತೆ ಈ ಪ್ರತಿಭಟನೆಯಲ್ಲಿ ಪ್ರತಿಭಟಿಸುತ್ತಿದ್ದಂತಹ ವಿದ್ಯಾರ್ಥಿಗಳು, ಅದರಲ್ಲಿಯೂ ಮಹಿಳಾ ವಿದ್ಯಾರ್ಥಿಗಳಿಗೆ ಈ ಘಟನೆಯಲ್ಲಿ ಗಂಭೀರ ಸ್ವರೂಪದ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
“ಮತ್ತೊಂದು ವಿದ್ಯಾರ್ಥಿಗಳ ಸಂಘಟನೆಯಿಂದ ಇನ್ನೊಂದು ಪ್ರತಿಭಟನೆ ನಡೆಯುತಿತ್ತು. ಅವರು ನಮ್ಮ ಪ್ರತಿಭಟನೆಯನ್ನು ಕೈಬಿಡುವಂತೆ ಸೂಚಿಸಿದರು. ಆದರೆ ನಾವು ನಿರಾಕರಿಸಿದೆವು. ಆಗ ಅವರು ನಮ್ಮ ಮೇಲೆ ದಾಳಿ ನಡೆಸಲು ಪ್ರಯತ್ನಿಸಿದರು ಆಗ ಪೊಲೀಸರು ಲಾಠಿ ಚಾರ್ಜ್ ಮಾಡಿದರು,” ಎಂದು ಎಬಿವಿಪಿ ಸಂಘಟನೆಯ ಸದಸ್ಯರು ಹಾಗೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಂತಹ ವಿದ್ಯಾರ್ಥಿಗಳ ಪೈಕಿ ಒಬ್ಬರಾದ ತೇಜಸ್ ತಿಳಿಸಿದ್ದಾರೆ.
ಅಂಕಪಟ್ಟಿಗಳನ್ನು ನೀಡುವಲ್ಲಿ ಆಗಿರುವ ವಿಳಂಬದ ವಿರುದ್ಧ ಎಬಿವಿಪಿ ಕಾರ್ಯಕರ್ತರು ಪ್ರತಿಭಟಿಸುತ್ತಿದ್ದರೆ, ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ, ರಾಯಚೂರಿನಲ್ಲಿ ೭೩ನೇ ಗಣರಾಜ್ಯೋತ್ಸವ ದಿನಾಚರಣೆಯಂದು ಜಿಲ್ಲಾ ನ್ಯಾಯಧೀಶರೊಬ್ಬರು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರೆವುಗೊಳಿಸಿದ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದರು.
ಪ್ರತಿಭಟನಾನಿರತ ವಿದ್ಯಾರ್ಥಿಗಳ ಪ್ರಕಾರ, ಘಟನೆಯಲ್ಲಿ ಗಾಯಗೊಂಡ ಓರ್ವ ವಿದ್ಯಾರ್ಥಿನಿಗೆ ತಲೆಯಲ್ಲಿ ಗಾಯವಾಗಿ ಬಹಳ ರಕ್ತ ಸೋರುತಿತ್ತು. ಇದು ಪೊಲೀಸರು ಲಾಠಿಚಾರ್ಜ್ ಮಾಡಿದ್ದರಿಂದಲೇ ಆಗಿದೆ ಎಂದು ಆರೋಪಿಸಿದ್ದಾರೆ. ಆದರೆ ಈ ಪ್ರದೇಶ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಇದನ್ನು ಅಲ್ಲಗಳೆದಿದ್ದಾರೆ.
ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್
Key words: Bangalore university-ABVP- Lathicharge