ಬೆಂಗಳೂರು:ಜುಲೈ-12:(www.justkannada.in) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ಲಾಸ್ಟಿಕ್ ಬಳಕೆ ವಿರುದ್ಧ ಕಠಿಣ ಕ್ರಮಕ್ಕೆ ಮುಮ್ದಾಗಿದ್ದು, ಜುಲೈ-15ರಿಂದ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಕಂಡುಬಂದಲ್ಲಿ ದಂಡ ವಿಧಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಈ ಕುರಿತು ಮೇಯರ್ ಗಂಗಾಂಬಿಕೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಕಂಡುಬಂದಲ್ಲಿ ದಂಡ ವಿಧಿಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಬಸ್, ರೈಲು ನಿಲ್ದಾಣ, ಮಾರುಕಟ್ಟೆ, ಉದ್ಯಾನ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಜಾರಿಗೊಳಿಸಬೇಕು. ಬಳಕೆ, ಮಾರಾಟ ಕಂಡುಬಂದರೆ ಕೂಡಲೇ ವಶಕ್ಕೆ ಪಡೆಯಬೇಕು. ಜತೆಗೆ ಆ ಕುರಿತಂತೆ ಸಾರ್ವಜನಿಕ ಸ್ಥಳಗಳಲ್ಲಿ ಫಲಕ ಅಳವಡಿಕೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಪ್ಲಾಸ್ಟಿಕ್ ಬಳಕೆ ಮಾಡದಿರುವ ಬಗ್ಗೆ ರೇಡಿಯೋ, ದಿನಪತ್ರಿಕೆಗಳ ಮೂಲಕ ಸಾರ್ವಜಕರಿಗೆ ಜಾಗೃತಿ ಮೂಡಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.
ಜು.15ರಿಂದ ವಾರ್ಡ್ ಸದಸ್ಯರು, ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಮಾರುಕಟ್ಟೆ, ಹೋಟೆಲ್, ಮಾಲ್, ಮಳಿಗೆಗಳ ಮೇಲೆ ದಾಳಿ ನಡೆಸಿ ನಿರ್ದಾಕ್ಷಿಣ್ಯವಾಗಿ ದಂಡ ವಿಧಿಸಬೇಕು. ಜತೆಗೆ ಮತ್ತೆ ಪ್ಲಾಸ್ಟಿಕ್ ಚೀಲ ಬಳಕೆ ಮಾಡಿದಲ್ಲಿ ದುಪ್ಪಟ್ಟು ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಬೇಕು ಎಂದಿದ್ದಾರೆ.
ವ್ಯಾಪಾರಿಗಳಿಗೆ ಬಿಬಿಎಂಪಿಯಿಂದಲೇ ಕಾಗದ ಚೀಲ ವಿತರಿಸಲು ಕ್ರಮ ವಹಿಸಲಾಗುತ್ತಿದೆ. ಅಲ್ಲದೆ ಎಲ್ಲ ವಿಧಾನಸಭಾ ಕ್ಷೇತ್ರವಾರು ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಜಾಗೃತಿ ಮೂಡಿಸಲು ಆಟೋಗಳಲ್ಲಿ ಧ್ವನಿವರ್ಧಕಗಳನ್ನು ಬಳಸಿ ಅರಿವು ಮೂಡಿಸಲು ಕ್ರಮಕ್ಕೆ ಸೂಚಿಸಲಾಗಿದೆ.