ಬೆಂಗಳೂರು,ಆ,20,2020(www.justkannada.in): ರಾಜ್ಯ ಕಂಡ ದೂರದೃಷ್ಠಿಯ ನಾಯಕ, ಹಿಂದುಳಿದ ಮತ್ತು ದುರ್ಬಲ ವರ್ಗದ ಧ್ವನಿ ಮುತ್ಸದ್ಧಿ ನಾಯಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮದಿನವಾಗಿದ್ದು, ಈ ಹಿನ್ನೆಲೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ಸ್ಮರಿಸಿದ್ದಾರೆ.
ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ವಿನಮ್ರವಾಗಿ ಸ್ಮರಿಸಿಕೊಳ್ಳುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಮರಿಸಿದ್ದಾರೆ.
ಹಾಗೆಯೇ ಯೂರಿಯಾ ಗೊಬ್ಬರ ಕೊರತೆ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು, ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ವಾಡಿಕೆಗಿಂತ ಈ ಬಾರಿ ರಾಜ್ಯದಾದ್ಯಂತ ಶೇಕಡ 25ರಷ್ಟು ಹೆಚ್ಚು ಬಿತ್ತನೆ ಆಗಿದೆ. ಕೃಷಿ ಇಲಾಖೆ ಇದನ್ನು ಅಂದಾಜಿಸುವಲ್ಲಿ ಎಡವಿರುವುದು ಮೇಲ್ನೋಟಕ್ಕೆ ಗೋಚರವಾಗುತ್ತದೆ. ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ ? ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದರು.
ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಗೊಬ್ಬರ ಕೊರತೆಯಿಂದ ಬಿತ್ತನೆ ಕಾರ್ಯ ನಿಲ್ಲಿಸದಂತೆ ತುರ್ತು ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿ ರಾಜ್ಯ ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
Key words: Birthday – former CM-D. Devaraja Arasu-Tweet-HD Kumaraswamy.