ಬೆಂಗಳೂರು, ಮಾರ್ಚ್ 29, 2024 (www.justkannada.in): ಗೃಹ ಸಚಿವರ ಬಗ್ಗೆ ನೀಡಿದ ಹೇಳಿಕೆ ಸಂಬಂಧ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಬಿಜೆಪಿ ನಾಯಕರು ಮುಗಿಬಿದ್ದಿದ್ದು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ವಿಪಕ್ಷ ನಾಯಕ ಆರ್.ಅಶೋಕ್, ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವರ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು. ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರ ಮಗ ಎನ್ನುವ ಕಾರಣಕ್ಕೆ ಹಾಗೂ ರಾಷ್ಟ್ರ ನಾಯಕರ ಬಗ್ಗೆ ಮಾತನಾಡಿದರೆ ದೊಡ್ಡ ವ್ಯಕ್ತಿಯಾಗುತ್ತೇನೆ, ಇದರಿಂದ ಬೆಲೆ ಬರುತ್ತದೆ ಎನ್ನುವ ಕಾರಣಕ್ಕೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತು ಟೀಕೆ ಮಾಡಿದ್ದಾರೆ. ಹತಾಶ ಮನೋಭಾವ, ಬುದ್ಧಿಭ್ರಮಣೆ ಹಾಗೂ ಅಪ್ರಬುದ್ಧತೆಯಿಂದ ಅವರು ಮಾತನಾಡಿದ್ದಾರೆ. ಅವರ ಪ್ರಜ್ಞೆಯ ಮಟ್ಟ ಬಹಳ ಕಡಿಮೆ ಇದೆ ಎಂದರು.
ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ- ಬಿಜೆಪಿ ಮುಖಂಡ ಮೋಹನ್
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಮುಖಂಡ ಮೋಹನ್, ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ವೃತ್ತಿಯಲ್ಲಿ ವೈದ್ಯರು, ಶಾಸಕರಾಗಿದ್ದವರು, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇಂತಹವರ ಬಾಯಿಂದ ಈ ರೀತಿಯ ಮಾತು ಬರೋದು ಸರಿಯಲ್ಲ ಎಂದರು.
ಕೂಡಲೇ ಯತೀಂದ್ರ ಸಿದ್ದರಾಮಯ್ಯ ಕ್ಷಮೆ ಕೇಳಬೇಕು. ಗೋದ್ರಾ ಹತ್ಯೆ ವಿಚಾರ ಕೂಡ ಪ್ರಸ್ತಾಪ ಮಾಡಿದ್ದಾರೆ. ಈ ರೀತಿ ಹೇಳಿಕೆಗಳನ್ನ ಕೊಡೋದನ್ನ ಯತೀಂದ್ರ ಸಿದ್ದರಾಮಯ್ಯ ನಿಲ್ಲಿಸಲಿ. ಇಲ್ಲ ಜನ ಮುಂದೆ ನಿಮಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಮುಖಂಡ ಮೋಹನ್ ವಾಗ್ದಾಳಿ ನಡೆಸಿದರು.
Key words: BJP -leaders -against -Yatindra Siddaramaiah.