ಬೆಂಗಳೂರು, ಜುಲೈ 13, 2020 (www.justkannada.in): ಜು.16ರಿಂದ 27ರವರೆಗೆ ನಿಗದಿಯಾಗಿದ್ದ ಪ್ರಥಮ ಪಿಯುಸಿ ಪೂರಕ(ಸಪ್ಲಿಮೆಂಟರಿ) ಪರೀಕ್ಷೆಯನ್ನು ಕೋವಿಡ್-19 ಹಿನ್ನೆಲೆಯಲ್ಲಿ ರದ್ದು ಪಡಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಎಸ್. ಸುರೇಶ್ ಕುಮಾರ್, ಸುಮಾರು 60 ಸಾವಿರ ವಿದ್ಯಾರ್ಥಿಗಳು ಪ್ರಥಮ ಪಿಯು ಪೂರಕ ಪರೀಕ್ಷೆ ಬರೆಯಬೇಕಿತ್ತು. ಕಾಲೇಜು ಹಂತದಲ್ಲಿ ಪರೀಕ್ಷೆಗಳನ್ನು ನಿರ್ವಹಿಸಿ ಜು. 30ರಂದು ಫಲಿತಾಂಶ ಪ್ರಕಟಿಸಲು ಈ ಹಿಂದೆ ನಿರ್ಧರಿಸಲಾಗಿತ್ತು.
ಇದೀಗ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ಹಾಗಾಗಿ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲ ವಿಷಯಗಳ ಪರೀಕ್ಷೆ ಬರೆದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೆ ದ್ವಿತೀಯ ಪಿಯುಸಿಗೆ ತೇರ್ಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.