ಬೆಂಗಳೂರು,ಸೆಪ್ಟಂಬರ್,29,2023(www.justkannada.in): ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದ್ದು ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ನಡುವೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಗಳೂರು ಏರ್ ಪೋರ್ಟ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಯತ್ನಿಸಿದರು.
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು, ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಕರವೇ ಕಾರ್ಯಕರ್ತರು ಕಾವೇರಿ ನೀರು ಬಿಡದಂತೆ ಘೋಷಣೆ ಕೂಗುತ್ತಾ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ್ದಾರೆ.
ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅರೈವಲ್ ಗೇಟ್ ಬಳಿ ಕರವೇ ಕಾರ್ಯಕರ್ತರು ಕನ್ನಡ ಬಾವುಟಗಳನ್ನು ಹಿಡಿದು ಒಳಗೆ ನುಗ್ಗಲು ಯತ್ನಿಸಿದ್ದು ಈ ವೇಳೆ ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಇದೀಗ 20 ಕ್ಕೂ ಅಧಿಕ ಕರವೇ ಕಾರ್ಯಕರ್ತರನ್ನ ವಶಕ್ಕೆ ಪಡೆದು, ಎಲ್ಲರನ್ನೂ ಕಾರುಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ.
ಇನ್ನು ಕರ್ನಾಟಕ ಬಂದ್ಗೆ ಕರೆಕೊಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸುವ ಮತ್ತು ತೆರಳಬೇಕಿದ್ದ 44 ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ. ವಿವಿಧ ರಾಜ್ಯಗಳಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ ಮತ್ತು ದೆಹಲಿ, ಮುಂಬೈ, ಕೋಲ್ಕತ್ತಾ ಸೇರಿ ಹಲವೆಡೆ ತೆರಳಬೇಕಿದ್ದ ವಿಮಾನಗಳನ್ನು ರದ್ದು ಮಾಡಲಾಗಿದೆ.
Key words: Cauvery fight- Attempt – airport-karave-activists