ಮೈಸೂರು, ಏ.09,2025: ಹಾಡಿಗಳಿಗೆ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ತುರ್ತು ಕ್ರಮ ವಹಿಸಿ ಕೆಲಸ ಮುಂದುವರಿಸುವಂತೆ ಸೆಸ್ಕ್ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು ಅವರು ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅಧ್ಯಕ್ಷತೆಯಲ್ಲಿ ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ಬುಧವಾರ ನಡೆದ ಚಾಮರಾಜನಗರ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
“ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಲಾಗಿದೆ. ಯಾವುದೇ ಸಮಸ್ಯೆ ಆದಲ್ಲಿ ನಿಗಮದ ಅಧ್ಯಕ್ಷರು, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೆ ಅದನ್ನು ಸರಿಪಡಿಸುತ್ತಾರೆ. ಹೀಗಾಗಿ ಯೋಜನೆಗೆ ಸಂಬಂಧಿಸಿದಂತೆ ಕೆಲಸ ಮುಂದುವರಿಸಿ” ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
“ಗ್ರಾಹಕರು ಹಾಗೂ ರೈತರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಫೀಡರ್ ನಿರ್ವಹಣೆ ಅಭಿಯಾನ, ಟ್ರಾನ್ಸ್‌ಫಾರ್ಮರ್ ನಿರ್ವಹಣೆ ಅಭಿಯಾನವನ್ನು ನಿರಂತರವಾಗಿ ಮಾಡಲಾಗುತ್ತಿದೆ. ಜೊತೆಗೆ ರೈತರಿಗೆ ಸಮರ್ಪಕ ವಿದ್ಯುತ್ ವ್ಯವಸ್ಥೆ ಹಾಗೂ ಪರಿವರ್ತಕಗಳನ್ನು ನೀಡಲು ಕ್ರಮವಹಿಸಲಾಗಿದೆ” ಎಂದು ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ಸಭೆಯಲ್ಲಿ ತಿಳಿಸಿದರು.
key words: CESCOM, Managing Director, Munigopal Raju, Mysore.
CESCOM Managing Director Munigopal Raju has instructed officials to take urgent steps to supply electricity to the villages.
