ನವದೆಹಲಿ,ಏಪ್ರಿಲ್,3,2025 (www.justkannada.in): ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ತಾವು ವೈಯಕ್ತಿಕವಾಗಿ ಗಮನ ಹರಿಸಬೇಕು ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರಿಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.
ರಾಜ್ಯದ ನೀರಾವರಿ ಯೋಜನೆಗಳ ಕುರಿತು ಕೇಂದ್ರ ಜಲಶಕ್ತಿ ಸಚಿವರಿಗೆ ಬೇಡಿಕೆ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ, ದೇಶದಲ್ಲೇ ರಾಜಸ್ಥಾನವನ್ನು ಹೊರತುಪಡಿಸಿದರೆ ಕರ್ನಾಟಕ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯವಾಗಿದೆ. ಕರ್ನಾಟಕದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಾಗೂ ಅನುಷ್ಠಾನಗೊಳಿಸಲಾಗಿರುವ ನೀರಾವರಿ ಯೋಜನೆಗಳು ರಾಜ್ಯದ ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಿಗೆ ಕಾರಣವಾಗಿವೆ. ಉತ್ಪಾದನೆಯಲ್ಲಿನ ಹೆಚ್ಚಳ, ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ನೀರಿನ ನಿರ್ವಹಣೆಯಲ್ಲಿ ಸುಧಾರಣೆ, ಹವಾಮಾನ ವೈಪರೀತ್ಯದ ನಿರ್ವಹಣೆ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ. ರಾಜ್ಯ ಸರ್ಕಾರ ಕೃಷಿ ಉತ್ಪಾದನೆ ಹೆಚ್ಚಳ, ರೈತರ ಆದಾಯ ಹೆಚ್ಚಳ ಮಾಡಲು ಪೂರಕವಾಗಿ ನಿರಂತರ ಮತ್ತು ಸಮರ್ಪಕ ನೀರಾವರಿ ಪೂರೈಕೆಗೆ ಬದ್ಧವಾಗಿದೆ.
ಕರ್ನಾಟಕ ರಾಜ್ಯದ ನೀರಾವರಿ ಯೋಜನೆ/ವಿಷಯಗಳಿಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ನಾನು ತಮ್ಮ ಗಮನ ಸೆಳೆಯಬಯಸುತ್ತೇನೆ. ಕೇಂದ್ರ ಸರ್ಕಾರದ ಅನುಮತಿಗಾಗಿ ಬಾಕಿಯಿರುವ ಕರ್ನಾಟಕದ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ತಾವು ವೈಯಕ್ತಿಕವಾಗಿ ಗಮನ ಹರಿಸಲು ಮನವಿ ಮಾಡುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ
ಕರ್ನಾಟಕ ರಾಜ್ಯದ ಬಾಕಿಯಿರುವ ಎಲ್ಲಾ ನೀರಾವರಿ ಯೋಜನೆಗಳಿಗೆ/ಪ್ರಸ್ತಾವನೆಗಳಿಗೆ ಅನುಮತಿ/ಕ್ಲಿಯರೆನ್ಸ್ ನೀಡಲು ಜಲಶಕ್ತಿ ಸಚಿವಾಲಯಕ್ಕೆ ತಾವು ನಿರ್ದೇಶನ ನೀಡಬೇಕು. ಈ ಯೋಜನೆಗಳು ರಾಜ್ಯದ ನೀರಾವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆ ಮೂಲಕ ರೈತರ ಕಲ್ಯಾಣಕ್ಕೆ ನೆರವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
Key words: implementation, Irrigation plan, CM Siddaramaiah, Union Minister