ಬೆಂಗಳೂರು,ಸೆಪ್ಟಂಬರ್,12,2024 (www.justkannada.in): ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಎಡ ಸಿದ್ದಾಂತದ ಪ್ರಖರ ಚಿಂತಕರಾಗಿದ್ದ ಯಚೂರಿ ಅವರು ಅಪ್ಪಟ ಪ್ರಜಾಪ್ರಭುತ್ವವಾದಿಯೂ ಆಗಿದ್ದರು.
ಕೋಮುವಾದಿ ರಾಜಕೀಯದ ವಿರುದ್ಧ ಜಾತ್ಯತೀತ ಶಕ್ತಿಗಳ ಒಗ್ಗೂಡಿಸುವಿಕೆಯಲ್ಲಿ ಮುಖ್ಯ ಪಾತ್ರ ವಹಿಸುತ್ತಾ ಬಂದಿರುವ ಯಚೂರಿಯವರು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ರೂವಾರಿಗಳಲ್ಲೊಬ್ಬರಾಗಿದ್ದರು. ಆ ಸರ್ಕಾರದ ‘ಸಾಮಾನ್ಯ ಕನಿಷ್ಠ ಕಾರ್ಯಕ್ರಮ’ ರಚನೆಯಲ್ಲಿಯೂ ಅವರದ್ದೇ ಪ್ರಧಾನ ಪಾತ್ರ ಇತ್ತು. ಕಳೆದ ವರ್ಷ ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭಕ್ಕೆ ಆಗಮಿಸಿ, ಶುಭ ಹಾರೈಸಿದ್ದರು ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.
ಈಗಿನ ‘ಇಂಡಿಯಾ’ ಒಕ್ಕೂಟ ಸ್ಥಾಪನೆಯಲ್ಲಿಯೂ ಅವರ ಕೊಡುಗೆ ಇದೆ. ಸೀತಾರಾಮ್ ಯಚೂರಿ ಅವರ ನಿಧನದಿಂದ ಕೋಮುವಾದ ಮತ್ತು ಬಂಡವಾಳವಾದದ ವಿರುದ್ಧದ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ. ಯಚೂರಿ ಅವರ ಕುಟುಂಬ ಮತ್ತು ಸಂಗಾತಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
Key words: CM Siddaramaiah, condoles, death, CPIM leader, Sitaram Yachuri