ಬೆಂಗಳೂರು,ಸೆಪ್ಟಂಬರ್,25,2023(www.justkannada.in): ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಮೋದಿ ಅವರು ಮಧ್ಯಸ್ಥಿಕೆ ವಹಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವುದೊಂದೇ ಪರಿಣಾಮಕಾರಿ ಮತ್ತು ಈ ಸಂದರ್ಭಕ್ಕನುಗುಣವಾದ ಪರಿಹಾರವಾಗಿದೆ. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗಳಾದ ದೇವೇಗೌಡರ ಮನವಿಯನ್ನು ಪುರಸ್ಕರಿಸಿ, ಕೂಡಲೇ ಮಾತುಕತೆಗೆ ಆಹ್ವಾನಿಸುತ್ತಾರೆಂದು ನಂಬಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್.ಡಿ.ದೇವೇಗೌಡರ ಈ ನಿರ್ಧಾರದಿಂದಾದರೂ ಪ್ರೇರಣೆ ಪಡೆದು ರಾಜ್ಯ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು ಸೇರಿ ಪ್ರಧಾನಮಂತ್ರಿ ಮಧ್ಯಪ್ರವೇಶಕ್ಕೆ ಒತ್ತಡ ಹೇರಬೇಕು. ಅತೀ ಶೀಘ್ರದಲ್ಲಿ ರಾಜ್ಯದ ಸರ್ವಪಕ್ಷಗಳ ನಾಯಕರ ನಿಯೋಗವನ್ನು ಪ್ರಧಾನ ಮಂತ್ರಿ ಭೇಟಿಮಾಡುವಂತೆ ಮಾಡಬೇಕು ಎಂದು ಅವರಲ್ಲಿ ಮನವಿ ಮಾಡುತ್ತೇನೆ ಎಂದು ಫೇಸ್ ಬುಕ್ ನಲ್ಲಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ನೆಲ-ಜಲ-ಭಾಷೆಯ ಹಿತಾಸಕ್ತಿಯ ರಕ್ಷಣೆಯ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ಭಿನ್ನಮತಗಳನ್ನು ಮರೆತು ಒಟ್ಟಾಗಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಯತ್ನ ಪಟ್ಟಿರುವ ಇತಿಹಾಸ ಕರ್ನಾಟಕ ರಾಜ್ಯಕ್ಕೆ ಇದೆ. ಈ ಪರಂಪರೆಯನ್ನು ಜೆಡಿಎಸ್ ಪಕ್ಷದಂತೆ ಬಿಜೆಪಿ ಕೂಡಾ ಪಾಲಿಸಿಕೊಂಡು ಬರುತ್ತದೆ ಎಂದು ನಾನು ನಂಬಿದ್ದೇನೆ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Key words: CM Siddaramaiah –welcomes- HD Deve Gowda’s- letter – PM Modi – Cauvery dispute.