ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸಿದ ಪ್ರಧಾನಿ ಮೋದಿಗೆ ತಿರುಗೇಟು ಕೊಟ್ಟ ಸಿಎಂ ಸಿದ್ಧರಾಮಯ್ಯ

ಬೆಂಗಳೂರು,ನವೆಂಬರ್,2,2024 (www.justkannada.in): ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸಿದ ಪ್ರಧಾನಿ ನರೇಂದ್ರ ಮೋದಿಗೆ ಟ್ವಿಟ್ ಮೂಲಕ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,  ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಯಶಸ್ಸು ಮತ್ತು ಇದರಿಂದಾಗಿ ಏರುಗತಿಯಲ್ಲಿ ಸಾಗುತ್ತಿರುವ ರಾಜ್ಯದ ಆರ್ಥಿಕತೆಯನ್ನು ಕಂಡು ಬೆನ್ನುತಟ್ಟಿ ಪ್ರೊತ್ಸಾಹ ನೀಡಬೇಕಾಗಿದ್ದ ದೇಶದ ಪ್ರಧಾನಿ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ ಸುಳ್ಳು ಆರೋಪಗಳ ಮೂಲಕ ಕರ್ನಾಟಕ ರಾಜ್ಯಕ್ಕೆ ಮತ್ತು ಕನ್ನಡಿಗರಿಗ ಅವಮಾನ ಮಾಡುತ್ತಿರುವುದು ವಿಷಾದನೀಯ ಬೆಳವಣಿಗೆ  ಎಂದು ಕುಟುಕಿದ್ದಾರೆ.

ಪ್ರಧಾನಿ ಮೋದಿ ಅವರೇ, ಇಂದು ಕನ್ನಡ ರಾಜ್ಯೋತ್ಸವದ ದಿನ. “ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ” ಎಂದು ಸಾರಿದ ರಾಷ್ಟ್ರಕವಿ ಕುವೆಂಪು ಅವರ ಕಾವ್ಯವನ್ನು ನಾಡಗೀತೆಯಾಗಿ ಸ್ವೀಕರಿಸಿರುವ ಕರ್ನಾಟಕ, ಭಾರತಕ್ಕೆ ತಾಯಿಯ ಸ್ಥಾನವನ್ನು ನೀಡಿದೆ. ಇದೇ ಪ್ರೀತಿ ಮತ್ತು ಬದ್ಧತೆಯಿಂದ ಪ್ರಾಮಾಣಿಕವಾಗಿ ತಮ್ಮ ಬೆವರಗಳಿಕೆಯನ್ನು ತೆರಿಗೆಯಾಗಿ ನೀಡಿ ದೇಶದ ಬೊಕ್ಕಸವನ್ನು ತುಂಬಿದವರು ಕನ್ನಡಿಗರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಬಡವರ ಕೈಗೆ ದುಡ್ಡು ಸಿಕ್ಕಿ ಅದು ಮಾರುಕಟ್ಟೆಗೆ ಹರಿದುಬಂದು ಅದರಿಂದ ತೆರಿಗೆ ಸಂಗ್ರಹವೂ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಬಲ ಬರಲಿದೆ ಎಂದು ಪ್ರಾರಂಭದಿಂದಲೂ ನಾನು ಹೇಳಿಕೊಂಡು ಬಂದಿದ್ದೇನೆ. ಅದು ಇಂದು ನಿಜವಾಗಿದೆ. ಇದಕ್ಕಾಗಿ ಕರ್ನಾಟಕಕ್ಕೆ ನೀವು ಶಹಾಬಾಸ್ ಗಿರಿ ಕೊಡಬೇಕಿತ್ತು, ಆದರೆ ನೀವು ಸುಳ್ಳಿನ ಬಾಣಗಳ ಮೂಲಕ ಕನ್ನಡಿಗರನ್ನು ಅವಮಾನಿಸುತ್ತಿದ್ದೀರಿ. ಇದು ಖಂಡನೀಯ, ಸಹಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Key words: CM Siddaramaiah,PM Modi, criticizing, guarantee schemes