ಚಾಮರಾಜನಗರ,7,2020(www.justkannada.in): ಚಾಮರಾಜನಗರದಲ್ಲಿ ನಗರಸಭೆ ವತಿಯಿಂದ ಮುಖ್ಯಮಂತ್ರಿಗಳ ನಗರೋತ್ಥಾನ ವಿಶೇಷ ಅನುದಾನದಲ್ಲಿ 2.90ರೂ ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ವಾಣಿಜ್ಯ ಸಂಕೀರ್ಣ ಕಟ್ಟಡ ಹಾಗೂ 2.50ರೂ ಕೋಟಿ ವೆಚ್ಚದಲ್ಲಿ ನವೀಕೃತಗೊಂಡಿರುವ ನಗರದ ಖಾಸಗಿ ಬಸ್ ನಿಲ್ದಾಣ ಇಂದು ಲೋಕಾರ್ಪಣೆಗೊಂಡಿತು.
ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್‍ಕುಮಾರ್ ಹಾಗೂ ಪೌರಾಡಳಿತ, ರೇಷ್ಮೆ ಹಾಗೂ ತೋಟಗಾರಿಕೆ ಸಚಿವರಾದ ಡಾ. ನಾರಾಯಣಗೌಡ ಅವರು ಈ ಎರಡು ಕಾರ್ಯಕ್ರಮಗಳನ್ನು ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಸಮರ್ಪಿಸಿದರು.
ಜಿಲ್ಲಾಡಳಿತ, ನಗಾರಾಭಿವೃದ್ಧಿ ಇಲಾಖೆ, ಪೌರಡಳಿತ ನಿರ್ದೇಶನಾಲಯ ಹಾಗೂ ನಗರಸಭೆ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್‍ಕುಮಾರ್ ಅವರು, ಸಾರ್ವಜನಿಕರ ಅನುಕೂಲಕ್ಕಾಗಿ ನಗರಸಭೆ ವತಿಯಿಂದ ವಾಣಿಜ್ಯ ಸಂಕೀರ್ಣ ಕಟ್ಟಡ ನಿರ್ಮಿಸಲಾಗಿದ್ದು ಕಟ್ಟಡದಲ್ಲಿ ವಾಹನ ನಿಲುಗಡೆ ಸ್ಥಳ, ಉಗ್ರಾಣ ಕೊಠಡಿ, ಶಾಪಿಂಗ್ ಮಳಿಗೆ ಹಾಗೂ ಶೌಚಾಲಯದ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೇ ಖಾಸಗಿ ಬಸ್ ನಿಲ್ದಾಣದಲ್ಲಿ ಏಕಕಾಲದಲ್ಲಿ 22 ಬಸ್‍ಗಳು ನಿಲ್ಲುವ ವ್ಯವಸ್ಥೆ ಮಾಡಲಾಗಿದೆ. ನಾಗರೀಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಕುಡಿಯುವ ನೀರು, ನಗರಾಭಿವೃದ್ಧಿ ಹಾಗೂ ಇತರೆ ಯೋಜನೆಗಳ ಬಗ್ಗೆ ಹೆಚ್ಚು ಗಮನವಹಿಸಲಾಗಿದೆ. ಇನ್ನುಳಿದ ಹಲವು ಹಂತದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರು, ಯು.ಡಿ.ಜಿ ಹಾಗೂ ಇತರೆ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಕಾರ್ಯ ನಿರ್ವಹಿಸಲಾಗುತ್ತದೆ ಎಂದು ಉಸ್ತುವಾರಿ ಸಚಿವರಾದ ಎಸ್.ಸುರೇಶ್‍ಕುಮಾರ್ ಅವರು ತಿಳಿಸಿದರು.
ಪೌರಾಡಳಿತ, ರೇಷ್ಮೆ ಹಾಗೂ ತೋಟಗಾರಿಕೆ ಸಚಿವರಾದ ಡಾ. ನಾರಾಯಣಗೌಡ ಅವರು ಮಾತನಾಡಿ ರಾಜ್ಯದಲ್ಲಿ ಲಾಕ್‍ಡೌನ್ ಸಂದರ್ಭದಲ್ಲಿ ರೇಷ್ಮೆ ಹಾಗೂ ತೋಟಗಾರಿಗೆ ಇಲಾಖೆಯಿಂದ ರೈತರ ಸಮಸ್ಯೆಗಳನ್ನು ಅರಿತು ರೈತರಿಗೆ ಬೆಂಬಲ ಬೆಲೆ ಹಾಗೂ ಪ್ರೋತ್ಸಾಹ ಧನ ನೀಡಲಾಗಿದೆ. ರೈತರನ್ನು ಸಂಕಷ್ಟದ ಸಂದರ್ಭದಲ್ಲಿ ಕೈಹಿಡಿಯಲಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಮಾನ್ಯ ಮುಖ್ಯಮಂತ್ರಿ ಅವರನ್ನು ಜಿಲ್ಲೆಗೆ ಕರೆತಂದು ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಡಿ.ಪಿ.ಆರ್ ಹಾಗೂ ಕುಡಿಯುವ ನೀರಿನ ಕೆಲಸವನ್ನು ಪೌರಡಳಿತ ಸಚಿವರು ಅದಷ್ಟು ಬೇಗ ಕಲ್ಪಿಸಬೇಕು ಎಂದು ಕೋರಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ಅಶ್ವಿನಿ, ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರೂ ಆದ ಸಿ.ಎಸ್. ನಿರಂಜನ್‍ಕುಮಾರ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಬಿ. ಶಾಂತಮೂರ್ತಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶಶಿಕಲಾ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಎಚ್.ಎಸ್. ಶೋಭಾ, ಉಪಾಧ್ಯಕ್ಷರಾದ ಕೆ. ರವೀಶ್, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೋಯರ್ ಹರ್ಷಲ್ ನಾರಾಯಣ ರಾವ್, ಪೌರಯುಕ್ತರಾದ ರಾಜಣ್ಣ ಅವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್‍ಗಳಾಗಿ ಕಾರ್ಯನಿರ್ವಹಿಸಿದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.