ಬೆಂಗಳೂರು,ಆಗಸ್ಟ್,16,2021(www.justkannada.in): ಬಾಕಿ ಉಳಿದಿರುವ ಕಾಮಗಾರಿಗಳನ್ನು ಕೈಗೆತ್ತಿಕೊಂಡು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ, ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದಲ್ಲಿ ಮೊದಲ ಸ್ಥಾನ ಪಡೆಯಬೇಕು ಎಂದು ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಸೂಚಿಸಿದರು.
ಸಚಿವ ಬಿ.ಎ.ಬಸವರಾಜ (ಬೈರತಿ) ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ ಬೆಂಗಳೂರಿನ ಇಂದಿರಾನಗರದಲ್ಲಿ ಇರುವ ಕೆಯುಐಡಿಎಫ್ ಸಿ ಸಭಾಂಗಣದಲ್ಲಿ ರಾಜ್ಯದ ಹತ್ತು ಮಹಾನಗರ (ಬೆಂಗಳೂರು ಹೊರತುಪಡಿಸಿ) ಪಾಲಿಕೆಗಳಲ್ಲಿ ನಡೆದಿರುವ ಅಭಿವೃದ್ಧಿ ಯೋಜನೆ ಗಳಿಗೆ ಸಂಬಂಧಿಸಿದಂತೆ ಸಭೆ ನಡೆಯಿತು.
ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಎಂ.ಎನ್. ಅಜಯ್ ನಾಗಭೂಷಣ್, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಬಿ.ಬಿ.ಕಾವೇರಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಶ್ರೀ ಎಂ.ಟಿ.ರೇಜು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು, ತುಮಕೂರು, ಶಿವಮೊಗ್ಗ, ಮಂಗಳೂರು, ದಾವಣಗೆರೆ, ಹುಬ್ಬಳ್ಳಿ ಧಾರವಾಡ, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಗಳ ಆಯುಕ್ತರು ಸಭೆಯಲ್ಲಿ ಭಾಗವಹಿಸಿದ್ದರು.
2019-20 ನೇ ಸಾಲಿನಲ್ಲಿ 700 ಕೋಟಿ ರೂಪಾಯಿಗಳು, 2020-21 ನೇ ಸಾಲಿನಲ್ಲಿ 1300 ಕೋಟಿ ರೂಪಾಯಿಗಳು ಮತ್ತು 2021-22 ನೇ ಸಾಲಿನಲ್ಲಿ ಇಲ್ಲಿಯವರೆಗೆ 537 ಕೋಟಿ ರೂಪಾಯಿಗಳನ್ನು ವಿವಿಧ ಯೋಜನೆಗಳ ಮೂಲಕ ಕಾಮಗಾರಿಗಳಿಗೆ ವೆಚ್ಚ ಮಾಡಲಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.
ದೇಶದ ಇತರೆ ರಾಜ್ಯಗಳ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕರ್ನಾಟಕ ಅನುಷ್ಠಾನದಲ್ಲಿ 6ನೇ ಸ್ಥಾನದಲ್ಲಿ ಇದೆ ಎಂದು ತಿಳಿಸಿದರು.
Key words: Complete – pending -work -Minister -Bhairati Basavaraj