ಬೆಂಗಳೂರು, ಡಿಸೆಂಬರ್ 10,2024 (www.justkannada.in): ಧೀಮಂತ ರಾಜಕಾರಣಿ, ಮಾಜಿ ಸಿಎಂ ಮಾಜಿ ಕೇಂದ್ರ ಸಚಿವ ಎಸ್. ಎಂ. ಕೃಷ್ಣ (92) ಅವರು ನಿಧನಕ್ಕೆ ಪ್ರಧಾನಿ ಮೋದಿ ,ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ..
‘ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದಿದ್ದಾರೆ.
ಎಸ್.ಎಂ.ಕೃಷ್ಣ ಅವರು ಅಸಾಧಾರಣ ನಾಯಕ: ಎಲ್ಲಾ ವರ್ಗದ ಜನರು ಮೆಚ್ಚಿಕೊಂಡಿದ್ದರು- ಪ್ರಧಾನಿ ಮೋದಿ
ಟ್ವೀಟ್ ಮಾಡಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಎಸ್.ಎಂ.ಕೃಷ್ಣ ಅವರು ಅಸಾಧಾರಣ ನಾಯಕರಾಗಿದ್ದರು, ಎಲ್ಲಾ ವರ್ಗದ ಜನರು ಮೆಚ್ಚಿಕೊಂಡಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೆ ಕೆಲಸ ಮಾಡಿದರು. ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಅವರು ನೀಡಿದ ಗಮನಕ್ಕಾಗಿ ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳಲಾಗುತ್ತದೆ. ಶ್ರೀ ಎಸ್.ಎಂ.ಕೃಷ್ಣ ಅವರು ಸಮೃದ್ಧ ಓದುಗ ಮತ್ತು ಚಿಂತಕರಾಗಿದ್ದರು ಎಂದು ತಿಳಿಸಿದ್ದಾರೆ.
ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನದಿಂದ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟ – ಸ್ಪೀಕರ್ ಯುಟಿ ಖಾದರ್
ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಟ್ವೀಟ್ ಮಾಡಿ , ‘ಎಸ್.ಎಂ.ಕೃಷ್ಣ ನಿಧನದ ವಿಚಾರ ತಿಳಿದು ತುಂಬಾ ದುಃಖವಾಗಿದೆ. ಎಸ್.ಎಂ.ಕೃಷ್ಣ ನಿಧನದಿಂದ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ಎಸ್.ಎಂ.ಕೃಷ್ಣ ಅಜಾತಶತ್ರು, ಉತ್ತಮ ರಾಜಕಾರಣಿ ಆಗಿದ್ದರು. ಸಿಎಂ ಆಗಿ, ಕೇಂದ್ರ ಸಚಿವರಾಗಿ ಸಾಕಷ್ಟು ಉತ್ತಮ ಕೆಲಸ ಮಾಡಿದ್ದರು. ಬೆಂಗಳೂರು ಅಭಿವೃದ್ಧಿಗೆ ಶ್ರಮಿಸಿದ್ದರು, ಹಲವು ಯೋಜನೆ ಜಾರಿಗೆ ತಂದಿದ್ದಾರೆ. ಎಸ್.ಎಂ.ಕೃಷ್ಣ ಅವರು ರಾಜಕಾರಣದಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ್ದರು. ನಾನು ವಿದ್ಯಾರ್ಥಿಯಾಗಿದ್ದಾಗಲೇ ಎಸ್.ಎಂ.ಕೃಷ್ಣ ಜೊತೆ ಸಂಪರ್ಕ ಇತ್ತು’ ಎಂದು ಸಂತಾಪ ಸೂಚಿಸಿದ್ದಾರೆ.
‘ಎಸ್.ಎಂ.ಕೃಷ್ಣ ಅವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದೆ. ಎಸ್.ಎಂ.ಕೃಷ್ಣ ಅವರ ಸಾಧನೆ ಯುವ ರಾಜಕಾರಣಿಗಳಿಗೆ ಸ್ಫೂರ್ತಿದಾಯಕವಾಗಿದೆ. ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.
ಎಸ್ ಎಂಕೆ ಅವರ ಸಾಧನೆ ಯುವ ರಾಜಕಾರಣಿಗಳಿಗೆ ಮಾದರಿ-ಸಚಿವ ಡಾ.ಜಿ.ಪರಮೇಶ್ವರ್
ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ‘ಎಸ್.ಎಂ.ಕೃಷ್ಣ ನಿಧನ ವಿಚಾರ ಕೇಳಿ ತುಂಬಾ ನೋವಾಗಿದೆ. ಉತ್ತಮ ರಾಜಕಾರಣಿಯನ್ನು ನಾವು ಕಳೆದುಕೊಂಡಿದ್ದೇವೆ. ಸಿಎಂ ಆಗಿ, ಕೇಂದ್ರ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದರು. ಬೆಂಗಳೂರು ನಗರದಲ್ಲಿ ಐಟಿ-ಬಿಟಿ ಸ್ಥಾಪನೆಗೆ ಕಾರಣರಾಗಿದ್ದರು. ಅವರಿಂದ ಬೆಂಗಳೂರು ಸಿಲಿಕಾನ್ ಸಿಟಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ. ಹಲವು ಯೋಜನೆಗಳ ಜೊತೆ ಹಲವು ಸವಾಲುಗಳನ್ನು ಎದುರಿಸಿದ್ದರು. ರಾಜ್ಕುಮಾರ್ ಅಪಹರಣ ಸಮಯದಲ್ಲಿ ಸಮರ್ಥವಾಗಿ ನಿಭಾಯಿಸಿದ್ದರು. ಕಾವೇರಿ ನದಿ ನೀರು ವಿಚಾರದಲ್ಲೂ ಸಮರ್ಥವಾಗಿ ಕೆಲಸ ಮಾಡಿದ್ದರು. ಎಸ್ಎಂಕೆ ಅವರ ಸಾಧನೆ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದಿದ್ದಾರೆ.
ಎಸ್.ಎಂ.ಕೃಷ್ಣ ಅವರ ಜೊತೆ ಉತ್ತಮ ಒಡನಾಡ ಇತ್ತು ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ದೇವರು ನೀಡಲಿ. ಎಸ್.ಎಂ.ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಗೃಹ ಸಚಿವ ಜಿ ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ.
Key words: PM Modi, CM Siddaramaiah, condole, death, S.M. Krishna