ಬೆಂಗಳೂರು, ಆಗಸ್ಟ್,8,2021(www.justkannada.in): ಟೋಕಿಯೊ ಓಲಂಪಿಕ್ ನಲ್ಲಿ ಈಟಿ ಎಸೆತದಲ್ಲಿ ಚಿನ್ನಕ್ಕೆ ಕೊರಳೊಡ್ಡಿದ ನೀರಜ್ ಛೋಪ್ರಾಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಾಧನೆಗೆ ತರಬೇತಿ ನೀಡಿದ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ ನಗದು ಬಹುಮಾನ ಘೋಷಿಸಿದ್ದಾರೆ.
ನೀರಜ್ ಛೋಪ್ರಾ ಚಿನ್ನದ ಪದಕಕ್ಕೆ ಮುತ್ತಿಕ್ಕುವಲ್ಲಿ ಕನ್ನಡಿಗನ ಪಾತ್ರವೂ ಇದೆ. ಛೋಪ್ರಾಗೆ ತರಬೇತಿ ನೀಡಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಾಶಿನಾಥ್ ನಾಯ್ಕ್. 2010 ರ ಕಾಮನ್ವೆಲ್ತ್ ನಲ್ಲಿ ಕಾಶಿನಾಥ್ ಈಟಿ ಎಸೆತದಲ್ಲಿ ಕಂಚಿನ ಪದಕಗಳಿಸಿದ್ದರು. ಅತ್ಯುತ್ತಮ ಕ್ರೀಡಾ ಸಾಧಕ ಕಾಶಿನಾಥ್ ಗರಡಿಯಲ್ಲಿ ಪಳಗಿದ ನೀರಜ್ ಸ್ವರ್ಣಪದಕ ಗಳಿಸಿ ದೇಶದ ಗೌರವವನ್ನು ಹೆಚ್ಚಿಸಿದ್ದಾರೆ. ಇಂತಹ ಸಾಧನೆಗೆ ಬೆನ್ನೆಲುಬಾದ ಕನ್ನಡಿಗ ಕಾಶಿನಾಥ್ ನಾಯ್ಕ್ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರೂ. 10 ಲಕ್ಷ ನಗದು ಬಹುಮಾನ ಘೋಷಿಸಿದ್ದಾರೆ.
ದೇಶದ ಕೀರ್ತಿ ಪತಾಕೆ ಹಾರಿಸಿದ ಕ್ರೀಡಾ ಸಾಧಕರಿಗೆ ಸನ್ಮಾನ
ಟೋಕಿಯೋ ಓಲಂಪಿಕ್ ನಲ್ಲಿ ಅಮೋಘ ಸಾಧನೆಗೈದ ಭಾರತದ 7 ಕ್ರೀಡಾಪಟುಗಳನ್ನು ರಾಜ್ಯ ಸರ್ಕಾರದ ವತಿಯಿಂದ ಸನ್ಮಾನಿಸಲಾಗುವುದು. ಈಗಾಗಲೆ ಸಿಎಂ ಜೊತೆ ಚರ್ಚೆ ನಡೆಸಿರುವ ಸಚಿವ ಡಾ. ನಾರಾಯಣಗೌಡ ಅವರು, ಎಲ್ಲ ಕ್ರೀಡಾಪಟುಗಳನ್ನು ಆಹ್ವಾನಿಸಿ ಗೌರವಿಸಲು ತೀರ್ಮಾನಿಸಿದ್ದಾರೆ. ಇದೇ ಸಂದರ್ಭದಲ್ಲಿ ತರಬೇತುದಾರ ಕಾಶಿನಾಥ್ ಅವರನ್ನು ಸನ್ಮಾನಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಓಲಂಪಿಕ್ ನಲ್ಲಿ ಭಾಗವಹಿಸಿದ ರಾಜ್ಯದ ಕ್ರೀಡಾಪಟುಗಳಿಗೂ ಗೌರವ
ಓಲಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯುವುದೂ ಒಂದು ದೊಡ್ಡ ಸಾಧನೆಯೆ ಆಗಿದೆ. ಟೋಕಿಯೋ ಓಲಂಪಿಕ್ ನಲ್ಲಿ ಮೂವರು ಕನ್ನಡಿಗರು ಪಾಲ್ಗೊಂಡು ಉತ್ತಮ ಸಾಧನೆ ತೋರಿದ್ದಾರೆ. ಪದಕ ಗಳಿಸಿದ ಕ್ರೀಡಾ ಸಾಧಕರನ್ನು ಗೌರವಿಸಿದಂತೆಯೆ ರಾಜ್ಯದ ಹೆಮ್ಮೆಯ ಕ್ರೀಡಾಪಟುಗಳಾದ ಅಶೋಕ್, ಶ್ರೀಹರಿ ನಟರಾಜ್, ಫೌವಾದ್ ಮಿರ್ಜಾ ಅವರನ್ನೂ ಸನ್ಮಾನಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಎ ಹೇಳಿದ್ದಾರೆ.
Key words: Congratulations – golden boy-niraj chopra- trainer- Kasinath Naik-minister- Narayana Gowda