ಮೈಸೂರು, ಆಗಸ್ಟ್, 18, 2020(www.justkannada.in): ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ರೋಗ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶ್ರೀನಿವಾಸ್ ಪ್ರಸಾದ್ ಅವರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಕೊರೋನಾ ಪಾಸಿಟಿವ್ ಎಂದು ವರದಿ ಬಂದಿದೆ. ಶ್ರೀನಿವಾಸ್ ಪ್ರಸಾದ್ ಅವರ ಕುಟುಂಬ ಸದಸ್ಯರ ಕೊರೋನಾ ಪರೀಕ್ಷೆಯ ವರದಿ ನೆಗೆಟಿವ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಸಾದ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ ಇದೀಗ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಬಿಜೆಪಿ ನಾಯಕರು, ಕಾರ್ಯಕರ್ತರಲ್ಲಿ ಕೊರೋನಾ ಭೀತಿ ಶುರುವಾಗಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ್ದ ಬಿ.ವೈ.ವಿಜಯೇಂದ್ರ ಅವರು ನಿನ್ನೆ ನಗರದ ಜಯಲಕ್ಷ್ಮಿಪುರಂನಲ್ಲಿರುವ ಪ್ರಸಾದ್ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಮಾತುಕತೆ ನಡೆಸಿದ್ದರು.
ಈ ವೇಳೆ ಎಂಎಲ್ ಸಿ ವಿಶ್ವನಾಥ್, ಮಾಜಿ ಸಚಿವ ಸಿ.ಎಚ್.ವಿಜಯಶಂಕರ್, ಹಾಸನ ಶಾಸಕ ಪ್ರೀತಂ ಗೌಡ, ಮುಡಾ ಮಾಜಿ ಅಧ್ಯಕ್ಷ ಸಿ.ಬಸವೇಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ನಿನ್ನೆ ಒಂದೇ ದಿನ 30ಕ್ಕೂ ಅಧಿಕ ಮಂದಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸಂಸದ ಶ್ರೀನಿವಾಸ್ ಪ್ರಸಾದ್ ಮನೆಗೆ ಭೇಟಿ ಕೊಟ್ಟಿದ್ದರು. 73 ವರ್ಷದ ಶ್ರೀನಿವಾಸ್ ಪ್ರಸಾದ್ ಆಗಸ್ಟ್ 6 ರಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದರು.
Key words: Corona Positive – MP V. Srinivas Prasad-mysore