ಮೈಸೂರು,ಅಕ್ಟೋಬರ್,14,2023(www.justkannada.in): ಖ್ಯಾತ ಸರೋದ್ ವಾದಕ ಪಂ. ರಾಜೀವ್ ತಾರನಾಥ್ ಅವರು ದಸರಾ ಕಾರ್ಯಕ್ರಮ ನೀಡುವ ಸಂಬಂಧ ಅಧಿಕಾರಿಗಳು ಕಮಿಷನ್ ಕೇಳಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಪತ್ರಿಕೆ ವರದಿ ಮಾಡಿದೆ. ಈ ವರದಿ ಪ್ರಕಟಗೊಳ್ಳುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಸರ್ಕಾರ ಮತ್ತು ಜಿಲ್ಲಾಡಳಿತ ವಿರುದ್ಧ ವ್ಯಾಪಕ ಆಕ್ರೋಶ ಟೀಕೆಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ಖುದ್ಧು ಮುಖ್ಯಮಂತ್ರಿಗಳ ಕಾರ್ಯಾಲಯವೇ ಸ್ಪಷ್ಟನೆ ನೀಡಿದ್ದು, ಇದು ಫೇಕ್ ನ್ಯೂಸ್ ಎಂದು ಹೇಳಿದೆ.
ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ದಸರಾದ ಸಂಪೂರ್ಣ ಜವಾಬ್ದಾರಿ ಹೊತ್ತಿರುವ ಹೆಚ್.ಸಿ ಮಹದೇವಪ್ಪ ಘಟನೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದು , ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಅವರ ಬಳಿಯಲ್ಲಿ ದಸರಾ ಕಾರ್ಯಕ್ರಮ ನೀಡಲು ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು, ಸಾಂಸ್ಕೃತಿಕ ನಗರಿಯ ಹೆಸರಿಗೆ ಕಳಂಕ ತರುವ ಕೆಲಸ ಮಾಡಿರುವ ಯಾರೇ ಆಗಿದ್ದರೂ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಹಾಗೆಯೇ ಸಾಂಸ್ಕೃತಿಕ ಮಹತ್ವವನ್ನು ಹಾಳು ಮಾಡುವ ಇಂತಹ ಸಂಗತಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ ಹಾಗೂ ನಾಡಹಬ್ಬ ದಸರಾದಲ್ಲಿ ಇಂತಹ ಘಟನೆಗಳು ಕಂಡು ಬಂದಲ್ಲಿ ಅದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕೆಂದು ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ಈ ಸುದ್ದಿ ಫೇಕ್ ಎಂದು ಹೇಳಿದ್ದಾರೆ. ಆದರೆ ಸಚಿವ ಹೆಚ್.ಸಿ ಮಹದೇವಪ್ಪ ಅವರು , ಈ ರೀತಿ ಕೆಲಸ ಮಾಡಿದ್ದರೇ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹೀಗಾಗಿ ಇದರಲ್ಲಿ ಅಧಿಕಾರಿಗಳು ಕಮಿಷನ್ ಪಡೆದಿರುವುದು ಸತ್ಯವೋ ಅಥವಾ ಈ ಸುದ್ದಿಯೇ ಸುಳ್ಳೋ ಎಂಬುದು ತಿಳಿದು ಬರಬೇಕಿದೆ.
Key words: Dasara Commission- What – truth-CM -clarification – in-charge minister’s -statement.