ಬೆಳಗಾವಿ, ನ.12,2019(www.justkannada.in): ಪ್ರವಾಹ ಸಂತ್ರಸ್ತರಿಗೆ ಮನೆ ನಿರ್ಮಿಸಲು ಬಿಡುಗಡೆ ಮಾಡಲಾಗಿರುವ ಮೊದಲ ಕಂತಿನ ಹಣದಲ್ಲಿ ಕೆಲವರು ಕಮೀಷನ್ ಪಡೆಯುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ. ಸಂತ್ರಸ್ತರ ಪರಿಹಾರ ಹಣದಲ್ಲಿ ಯಾರಾದರೂ ಕಮೀಷನ್ ಕೇಳಿರುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ.
ಪರಿಹಾರದ ಹಣದಲ್ಲಿ ಕಮೀಷನ್ ಪಡೆಯಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿಗಳು, ಇಂತಹ ಪ್ರಕರಣ ಕಂಡುಬಂದ ತಕ್ಷಣವೇ ಮೊಕದ್ದಮೆ ದಾಖಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಮನೆಯ ನಿರ್ಮಾಣಕ್ಕೆ ಮೊದಲ ಕಂತಿನ ಒಂದು ಲಕ್ಷ ರೂಪಾಯಿ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ.
ಈ ಹಣದಲ್ಲಿ ಕೆಲವರು ಕಮೀಷನ್ ಕೇಳುತ್ತಿದ್ದಾರೆ ಎಂಬುದು ಸಹಿಸಲು ಸಾಧ್ಯವಿಲ್ಲ. ಪರಿಹಾರ ಬಿಡುಗಡೆ ವಿಚಾರದಲ್ಲಿ ಮಧ್ಯವರ್ತಿಗಳಿಗೆ ಆಸ್ಪದವೇ ಇರುವುದಿಲ್ಲ. ಸಂತ್ರಸ್ತರು ಮೊದಲ ಕಂತಿನ ಹಣದಲ್ಲಿ ನಿಗದಿತ ಹಂತದವರೆಗೆ ಮನೆ ನಿರ್ಮಿಸಿ, ಛಾಯಾಚಿತ್ರದ ಸಮೇತ ದಾಖಲೆಗಳನ್ನು ಸಲ್ಲಿಸಿದ ಬಳಿಕ ಎರಡನೇ ಕಂತಿನ ಹಣ ನೇರವಾಗಿ ಅವರ ಖಾತೆಗೆ ಜಮೆಯಾಗುತ್ತದೆ. ಆದ್ದರಿಂದ ಸಂತ್ರಸ್ತರು ಯಾವುದೇ ಕಾರಣಕ್ಕೂ ಯಾರಿಗೂ ಹಣ ನೀಡಬಾರದು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಒಂದು ವೇಳೆ ಯಾರಾದರೂ ಪರಿಹಾರ ಮಂಜೂರು ಮಾಡಲು ಹಣಕ್ಕಾಗಿ ಬೇಡಿಕೆ ಇಟ್ಟರೆ ತಕ್ಷಣವೇ ಅಂತಹವರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಬೇಕು. ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಮತ್ತು ತಹಶೀಲ್ದಾರ ಕಾರ್ಯಾಲಯಕ್ಕೂ ಮಾಹಿತಿ ನೀಡಬೇಕು.
ಸಂಬಂಧಿಸಿದ ತಹಶೀಲ್ದಾರರು ಹಾಗೂ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಕೂಡ ಇಂತಹ ಪ್ರಕರಣಗಳ ಬಗ್ಗೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
Key words: Demanding- Commission – Compensation- belagavi-DC- Dr SB Bommanahalli-warned