ಮೈಸೂರು,ಜೂನ್,13,2023(www.justkannada.in): ವಿದ್ಯುತ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯಗೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪತ್ರ ಬರೆದಿದ್ದಾರೆ.
ವಿದ್ಯುತ್ ದರ ಏರಿಕೆ ಯಿಂದ ರಾಜ್ಯದ ಜನರು ಹೈರಾಣಾಗಿದ್ದಾರೆ. ಈ ಹಿನ್ನೆಲೆ ಜನರು ರಾಜ್ಯ ಸರ್ಕಾರ ಮತ್ತು ಎಸ್ಕಾಂಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಾರಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ. ಹೀಗಾಗಿ ವಿದ್ಯುತ್ ದರ ಏರಿಕೆಯನ್ನು ಮರು ಪರಿಶೀಲನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಶಾಸಕ ತನ್ವೀರ್ ಸೇಠ್ ಪತ್ರ ಬರೆದು ಮನವಿ ಮಾಡಿದ್ದಾರೆ.
ಪತ್ರದಲ್ಲಿ “ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಂಡ ಜಯಗಳಿಸಿದೆ. ಸರ್ಕಾರ ರಚನೆಯಾದ ದಿನವೇ 5 ಗ್ಯಾರಂಟಿ ಘೋಷಣೆ ಮಾಡಲಾಗಿದೆ. ಗ್ಯಾರಂಟಿಗಳಲ್ಲಿ ಒಂದಾದ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆಗೆ ವ್ಯತಿರಿಕ್ತವೆಂಬಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಯಿಂದ ರಾಜ್ಯದ ಎಲ್ಲಾ ನಿಗಮಗಳಲ್ಲಿ ವಿದ್ಯುತ್ ದರ ಹೆಚ್ಚಿಸಲಾಗಿದೆ.
“ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪ್ರಸ್ತುತ ಸರ್ಕಾರ ಘೋಷಿಸಿರುವ 200 ಯೂನಿಟ್ ಉಚಿತ ಸೌಲಭ್ಯವನ್ನು ಜನ ಸಾಮಾನ್ಯರಿಗೆ ನೀಡಿ ಕಿತ್ತುಕೊಂಡಂತಾಗಿದೆ. ವಿದ್ಯುತ್ ದರ ಏರಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ಪರಿಶೀಲಿಸಿ. ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಜಾರಿಗೊಳಿಸಿ” ಎಂದು ಶಾಸಕ ತನ್ವೀರ್ ಸೇಠ್ ಪತ್ರದಲ್ಲಿ ಮನವಿ ಮಾಡಿದ್ದಾರೆ.
Key words: Electricity rate- hike –issue- MLA -Tanveer Sait- letter -CM Siddaramaiah.