ಬೆಂಗಳೂರು, ಜೂನ್ 26, 2022 (www.justkannada.in): ಪಠ್ಯ ಪರಿಷ್ಕರಣೆ ವಿಷಯದಲ್ಲಿ ಬಿಜೆಪಿ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರವು ತಾನೇ ಮಾಡಿಕೊಂಡಿರುವ ಎಡವಟ್ಟುಗಳನ್ನು ಗೌರವಯುತವಾಗಿ ಒಪ್ಪಿಕೊಂಡು ಪರಿಷ್ಕೃತ ಪಠ್ಯವನ್ನು ತಿರಸ್ಕರಿಸಬೇಕಿತ್ತು. ಆದನ್ನು ಬಿಟ್ಟು ಮತ್ತೆ ಮತ್ತೆ ಸುಳ್ಳು ಹೇಳುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ವಿಚಾರವಾಗಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಪರಿಷ್ಕರಿಸಿರುವ ಪಠ್ಯಪುಸ್ತಕಗಳನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ. ಯಾರ ಒತ್ತಡಕ್ಕೂ ಮಣಿಯುವುದಿಲ್ಲ’ವೆಂಬ ಹೇಳಿಕೆ ನೀಡಿದ್ದ ಕಂದಾಯ ಸಚಿವ ಆರ್.ಅಶೋಕ್ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
‘ಕಂದಾಯ ಸಚಿವ ಆರ್.ಅಶೋಕ್ ಹೇಳಿರುವ ಸುಳ್ಳುಗಳನ್ನು ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಬೇಕು. ಇಲ್ಲವಾದರೆ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.