ಬೆಂಗಳೂರು,ಸೆಪ್ಟಂಬರ್,22,2020(www.justkannada.in): ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ವಿದ್ಯುತ್ ಕಾಯ್ದೆ ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಬೆಂಗಳೂರಿನಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು ರೈತರ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಭೂ ಸುಧಾರಣಾ ಕಾಯ್ದೆ ತಿದ್ಧುಪಡಿ ವಿರೋಧಿಸಿ ರೈತ ಸಂಘಟನೆಗಳು ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ನಂತರ ತಮ್ಮ ಪಕ್ಷದ ನಾಯಕರ ಜತೆ ಚರ್ಚಿಸಿ ಬೆಂಬಲದ ಬಗ್ಗೆ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರು.
ಫ್ರೀಡಂಪಾರ್ಕ್ ಗೆ ಭೇಟಿ ನೀಡಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರೈತರ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ಸರ್ಕಾರಕ್ಕೆ ರೈತರ ನೋವು ಅರ್ಥವಾಗುವುದಿಲ್ಲ. ರೈತರ ಬದುಕು ಉಳಿಯುವುದು ಮುಖ್ಯ. ಕಾಂಗ್ರೆಸ್ ರೈತರ ಪರವಾಗಿದೆ. ನಿಮ್ಮ ಹೋರಾಟಕ್ಕೆ ಜಯವಾಗಲಿ ಎಂದು ಹಾರೈಸಿದರು.
ರೈತರ ಹೋರಾಟ ರಾಜಕೀಯ ಪ್ರೇರಿತ ಅಲ್ಲ. ರಾಜಕೀಯ ಪ್ರೇರಿತ ಎಂಬುದು ಸುಳ್ಳು. ರೈತರ ಹೋರಾಟದ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ್ದೇನೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.
Key words: farmer- protest – not politically- motivated-KPCC President- DK Sivakumar.