ಮೈಸೂರು,ಜೂನ್,16,2022(www.justkannada.in): ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಇದೇ ಮೊದಲ ಬಾರಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಈ ಮೂಲಕ ಕಾಂಗ್ರೆಸ್ ಪಕ್ಷ ಇತಿಹಾಸ ನಿರ್ಮಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಬಣ್ಣಿಸಿದರು.
ದಕ್ಷಿಣ ಪದವೀಧರ ಕ್ಷೇತ್ರದ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್, ಪದವೀಧರ ಕ್ಷೇತ್ರದಲ್ಲಿ ಇದೇ ಮೊದಲ ಬಾರಿ ಪದವೀಧರರು ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದಾರೆ. ಇದಕ್ಕಾಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಪಕ್ಷದ ಸಂಘಟಿತ ಹೋರಾಟದ ಫಲವಾಗಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಹಾಗೂ ಅವರ ಬೆಂಬಲಿಗರು ಕಾಂಗ್ರೆಸ್ ಗೆ ಬೆಂಬಲ ನೀಡಿದ್ದರಿಂದ ಗೆಲುವು ಲಭಿಸಿದೆ. ಈ ಚುನಾವಣೆ ಫಲಿತಾಂಶ ಮುಂಬರುವ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ವಿಶ್ಲೇಷಿಸಿದರು.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿನಾಕಾರಣ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ರಾಹುಲ್ ಗಾಂಧಿ ಹಾಗೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಐಟಿ ಇಡಿ ಬಳಸಿಕೊಂಡು ಕಿರುಕುಳ ನೀಡಲಾಗುತ್ತಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಈ ಬಗ್ಗೆ ದೆಹಲಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಕಾಂಗ್ರೆಸ್ ಹಿರಿಯ ನಾಯಕರಾದ ಪಿ ಚಿದಂಬರಂ, ವೇಣುಗೋಪಾಲ್, ಸಂಸದ ಡಿ ಕೆ ಸುರೇಶ್ ರನ್ನು ಅತ್ಯಂತ ಹೀನಾಯವಾಗಿ ನಡೆಸಿಕೊಳ್ಳಲಾಗಿದೆ. ಕಾಂಗ್ರೆಸ್ ನಾಯಕರ ವಿರುದ್ಧ ದೆಹಲಿ ಪೊಲೀಸರು ಗೂಂಡಾಗಿರಿ ಮಾಡಿದ್ದಾರೆ ಎಂದು ಆರ್ ಧ್ರುವನಾರಾಯಣ್ ಆರೋಪಿಸಿದರು.
ದ್ವೇಷದ ರಾಜಕಾರಣ ಹೆಚ್ಚು ದಿನ ನಡೆಯುವುದಿಲ್ಲ. ದ್ವೇಷ ರಾಜಕಾರಣ ನಾಶವಾಗಲಿದೆ. ವಿರೋಧ ಪಕ್ಷಗಳನ್ನು ಧಮನ ಮಾಡಲು ಹೊರಟಿರುವ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಆರ್ ಧ್ರುವನಾರಾಯಣ್ ಹರಿಹಾಯ್ದರು.
ಬಿಜೆಪಿ ವಕ್ತಾರರಾದ ನೂಪುರ್ ಶರ್ಮ ಹಾಗೂ ನವೀನ್ ಜಿಂದಾಲ್ ನೀಡಿದ ವಿವಾದಾತ್ಮಕ ಹೇಳಿಕೆಗಳಿಂದ ದೇಶದಾದ್ಯಂತ ಅಶಾಂತಿ ಉಂಟಾಗಿದೆ. ಇದರಿಂದ ಜಾಗತೀಕ ಮಟ್ಟದಲ್ಲಿ ಟೀಕೆ ವ್ಯಕ್ತವಾಗಿದೆ. ಇಂತಹ ಬೇಜವಾಬ್ದಾರಿ ಹೇಳಿಕೆಗಳಿಂದ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಅರಬ್ ರಾಷ್ಟ್ರಗಳು ಖಂಡನೆ ವ್ಯಕ್ತಪಡಿಸಿದ ನಂತರ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದೆ. ಧರ್ಮದ ವಿರುದ್ಧ ಹೇಳಿಕೆ ನೀಡುವುದು ದೇಶ ದ್ರೋಹದ ಕೆಲಸ. ಈ ಬಗ್ಗೆ ವಿದೇಶಗಳು ಭಾರತಕ್ಕೆ ಎಚ್ಚರಿಕೆ ಕೊಟ್ಟಿವೆ. ಇವರು ಭಾರತದ ಗೌರವ ಹಾಳು ಮಾಡಿದ್ದಾರೆ, ದೇಶ ತಲೆ ತಗ್ಗಿಸುವಂತೆ ಮಾಡಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಬಿಜೆಪಿ ನಾಯಕರು ಇತ್ತೀಚಿಗೆ ಬಾಯಿ ಬಿಡುತ್ತಿಲ್ಲ, ತುಟಿಕ್ ಪಿಟಿಕ್ ಎನ್ನುತ್ತಿಲ್ಲ. ಬಿಜೆಪಿ ನಾಯಕರು ಬಾವಿಯಲ್ಲಿರುವ ಕಪ್ಪೆಗಳಂತೆ. ಅವರಿಗೆ ಪ್ರಪಂಚ ಜ್ಞಾನವಿಲ್ಲ ಎಂದು ಆರ್ ಧ್ರುವನಾರಾಯಣ್ ಟೀಕಿಸಿದರು.
Key words: first congress-victory – Southern –graduate- election-R. Dwavanarayan.