ಬೆಂಗಳೂರು, ಡಿಸೆಂಬರ್ ,18,2023(www.justkannada.in): ರಾಜ್ಯದಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಲು ಆಗ್ರಹಿಸಿ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ.
ಬೆಳಗಾವಿಯಲ್ಲಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ವಿಶೇಷ ಚರ್ಚೆ ಮತ್ತು ಸಮರ್ಪಕವಾಗಿ ಉತ್ತರವನ್ನು ಉತ್ತರ ಕರ್ನಾಟಕದ ಜನರು ನಿರೀಕ್ಷೆ ಮಾಡಿದ್ದರು. ಆದರೆ, ಯಾವುದೆ ಅಭಿವೃದ್ಧಿ ಪರ ನಿರ್ಣಯಗಳನ್ನು ಸರ್ಕಾರ ಘೋಷಿಸದೇ ಈಗಾಗಲೇ ಇರುವಂತಹ ಕಾರ್ಯಕ್ರಮಗಳನ್ನು ಪುನಃ ಘೋಷಿಸಿ ಜನರ ನೀರಿಕ್ಷೆಯನ್ನು ಹುಸಿಗೊಳಿಸಿದೆ. ಹೀಗಾಗಿ ತುಂಗಭದ್ರ ಸಮತೋಲನ ಜಲಾಶಯಕ್ಕೆ ಕೂಡಲೇ ನೆರೆ ರಾಜ್ಯಗಳೊಂದಿಗೆ ಮಾತನಾಡಿ ಯೋಜನೆ ಜಾರಿಗೆ ಕ್ರಮ ತೆಗೆದುಕೊಳ್ಳಬೇಕು. ಕೊಪ್ಪಳ ಮತ್ತು ರಾಯಚೂರು ವಿಮಾನ ನಿಲ್ದಾಣಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಇಟ್ಟ ಹಣ ಪ್ರಯೋಜನ ಪಡೆಯಲು ಕೂಡಲೇ ಗಮನ ಹರಿಸಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 5000 ಕೋಟಿ ರೂ. ನೀಡುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದೀರಿ ಆದರೆ ಇದುವರೆಗೂ ಆ ಭಾಗದ ಯಾವುದೇ ಯೋಜನೆಗಳಿಗೆ ಅನುಮೋದನೆ ನೀಡದಿರುವುದು ಹಿಂದುಳಿದ ಭಾಗದ ಬಗ್ಗೆ ನಿಮಗಿರುವ ನಿರ್ಲಕ್ಷ್ಯದ ಧೋರಣೆ ಎತ್ತಿ ತೋರಿಸುತ್ತದೆ ಎಂದು ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಹಾನಗಲ್ ಬ್ಯಾಡಗಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ ಬರುವ ಮುಂಗಾರಿನಲ್ಲಿ ಚಾಲನೆ ನೀಡಬೇಕು. ನೂತನ ಏಳು ವಿಶ್ವ ವಿದ್ಯಾಲಯಗಳನ್ನು ಅನುದಾನದ ಕೊರತೆ ನೆಪದಲ್ಲಿ ಮುಚ್ಚುವ ಪ್ರಸ್ತಾಪವನ್ನು ಕೈ ಬಿಡಬೇಕು. ಹಾವೇರಿಯಲ್ಲಿ ಮೆಡಿಕಲ್ ಕಾಲೇಜು ಆರಂಭಿಸಿದ್ದು, ಅಗತ್ಯ ಹಣ ಬಿಡುಗಡೆ ಮಾಡಬೇಕು. ಹಾವೇರಿ ಮೆಗಾ ಡೈರಿಗೆ ಕೂಡಲೇ ಹಣ ಬಿಡುಗಡೆ ಮಾಡಬೇಕು. ರಾಣೆ ಬೆನ್ನೂರು ಮಿನಿ ಟೆಕ್ಸ್ ಟೈಲ್ ಪಾರ್ಕ್ನ್ನು ಶೀಘ್ರವೇ ಆರಂಭಿಸಬೇಕು ಎಂದು ಬಸವರಾಜ ಬೊಮ್ಮಾಯಿ ಕೋರಿದ್ದಾರೆ.
Key words: Former CM –Bommai- letter – CM Siddaramaiah