ಬೆಂಗಳೂರು, ಜುಲೈ 24, 2022 (www.justkannada.in): ಹೊಸದಾಗಿ ಆಯ್ಕೆಯಾದ ಶಾಸಕರು ಮತ್ತು ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿಯನ್ನು ನಿರ್ಧರಿಸುತ್ತದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಿಎಂ ಮಹತ್ವಾಕಾಂಕ್ಷೆಯಲ್ಲಿ ತಪ್ಪೇನಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದಿ ನ್ಯೂ ಸಂಡೇ ಎಕ್ಸ್ ಪ್ರೆಸ್ ಗೆ ನೀಡಿರುವ ಸಂದರ್ಶನದಲ್ಲಿ ಮಾಜಿ ಸಿಎಂ ಹಲವಾರು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಈಗ ನಾನು 75 ನೇ ವರ್ಷಕ್ಕೆ ಕಾಲಿಡುತ್ತಿರುವಾಗ ನನ್ನ ಹುಟ್ಟುಹಬ್ಬ ಆಚರಿಸಲು ಕೆಲವು ಸ್ನೇಹಿತರು ಮತ್ತು ಹಿತೈಷಿಗಳು ಸಲಹೆ ನೀಡಿದರು. ನಾನು ಇಷ್ಟವಿಲ್ಲದೆ ಒಪ್ಪಿದೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದಿದ್ದಾರೆ.
ಶಾಸಕರು ಮತ್ತು ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿಯನ್ನು ನಿರ್ಧರಿಸುತ್ತಾರೆ. ನಾವು ನಮ್ಮನ್ನು ಬಿಂಬಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಅದನ್ನು ಪ್ರಜಾಸತ್ತಾತ್ಮಕ ರೀತಿಯಲ್ಲಿ ಮಾಡಬೇಕು. ಶಾಸಕರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡುತ್ತಾರೆ, ನಂತರ ಪಕ್ಷದ ಹೈಕಮಾಂಡ್ ಒಪ್ಪಿಗೆ ನೀಡುತ್ತದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಆಗುವ ಆಸೆಯಲ್ಲಿ ತಪ್ಪೇನಿಲ್ಲ. ಅಂತಿಮವಾಗಿ ಶಾಸಕರು ಮತ್ತು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ. ಕೆಪಿಸಿಸಿ ಅಧ್ಯಕ್ಷರೂ ಮುಖ್ಯಮಂತ್ರಿಯಾಗಿದ್ದಾರೆ, ಇನ್ನು ಕೆಲವರು ಸಿಎಂ ಆಗಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ನಾಯಕರೂ ಸಿಎಂ ಆಗಿದ್ದಾರೆ. ಎರಡೂ ರೀತಿಯ ಪೂರ್ವನಿದರ್ಶನಗಳಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.