ಬೆಂಗಳೂರು, ಜನವರಿ,31,2024(www.justkannada.in): ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಡ್ಯದ ಲೋಕೋಪಯೋಗಿ ಇಲಾಖೆ ಇಇ ಆಗಿರುವ ಹರ್ಷಾ ಅವರ ಕಚೇರಿ, ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ, ಮಂಡ್ಯ ಜಿಲ್ಲೆಯಲ್ಲಿರುವ ಸಂಬಂಧಿಕರ ಮನೆಗಳು, ಮಂಡ್ಯದ ಕಚೇರಿ ಮೇಲೆ ಲೋಕಾಯುಕ್ತ ದಾಳಿಯಾಗಿದೆ.
ಹಾಗೆಯೇ ಹಾಸನದ ಆಹಾರ ನೀರಿಕ್ಷಕ ಜಗನ್ನಾಥ್ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಕಚೇರಿ ಹಾಗೂ ನಿವಾಸದಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ. ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ತುಮಕೂರಿನಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ತುಮಕೂರಿನ ಶಿರಾ ಗೇಟ್ ಬಳಿಯಿರುವ KRDL ಇಂಜಿನಿಯರ್ ಹನುಮಂತರಾಯಪ್ಪ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ತರೀಕೆರೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
Key words: Shock – government officials-Lokayukta -attacks