ಮೈಸೂರು, ಜುಲೈ 02, 2023 (www.justkannada.in): ಮಳೆ ಇಲ್ಲದೆ ಕಂಗೆಟ್ಟ ರೈರಿಗೆ ಸಿಹಿ ಸುದ್ದಿಯನ್ನು ಹವಾಮಾನ ಇಲಾಖೆ ನೀಡಿದೆ.
ಬರಗಾಲದ ಭಯದಲ್ಲಿದ್ದ ಜನತೆಗೆ ಹವಾಮಾನ ಇಲಾಖೆ ಅಧಿಕಾರಿಗಳು ಸಿಹಿ ಸುದ್ದಿ ನೀಡಿದ್ದಾರೆ. ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯಲಿದೆ.
ಜುಲೈ 4ರಿಂದ ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜು.4ರಿಂದ ಜು.6ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ. ಹೀಗಾಗಿ ಈಗಾಗಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಜು.6ರಂದು ಅತಿ ಹೆಚ್ಚು ಮಳೆಯಾಗಲಿದ್ದು, ಇಲಾಖೆಯಿಂದ ರೆಡ್ ಅಲರ್ಟ್ ನೀಡಲಾಗಿದೆ. ಇದಕ್ಕಿಂತ ಮುನ್ನ ಜು.4 ಮತ್ತು ಜು.5ರಂದು ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಕೊಡಲಾಗಿದೆ.
ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗಲಿದೆ. ಜೂನ್ನಲ್ಲಿ ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿತ್ತು. 100 ತಾಲೂಕುಗಳಲ್ಲಿ ಮಳೆ ಕುಂಠಿತವಾದರೆ, 87 ತಾಲೂಕುಗಳಲ್ಲಿ ತೀವ್ರವಾಗಿ ಮಳೆ ಅಭಾವ ಉಂಟಾಗಿದೆ. ಜೂ 1ರಿಂದ ಜೂ.30ರವರೆಗೆ ರಾಜ್ಯಾದ್ಯಂತ ವಾಡಿಕೆಯಂತೆ 199 ಮಿಮೀ ಮಳೆಯಾಗಬೇಕಿತ್ತು. 87 ಮಿಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.56ರಷ್ಟು ಕಡಿಮೆ ಪ್ರಮಾಣದಲ್ಲಿ ಸುರಿದಿದೆ.
ದಕ್ಷಿಣ ಕರ್ನಾಟಕದಲ್ಲಿ ಶೇ.18, ಉತ್ತರ ಕರ್ನಾಟಕದಲ್ಲಿ ಶೇ. 55, ಮಲೆನಾಡಲ್ಲಿ ಶೇ. 74, ಕರಾವಳಿಯಲ್ಲಿ ಶೇ. 57 ಮಳೆ ಕುಂಠಿತವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.