ಬೆಂಗಳೂರು:ಜುಲೈ-13: ಅತಂತ್ರ ಸ್ಥಿತಿಯಲ್ಲಿರುವ ಮೈತ್ರಿ ಸರ್ಕಾರದ ಜವಾಬ್ದಾರಿ ಹೊತ್ತುಕೊಳ್ಳಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಿಂದೇಟು ಹಾಕುತ್ತಿದ್ದಾರೆ. ತಂಡೋಪತಂಡವಾಗಿ ಶಾಸಕರು ರಾಜೀನಾಮೆ ಸಲ್ಲಿಸುತ್ತಿರುವುದರಿಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ, ಎಲ್ಲರೂ ರಾಜೀನಾಮೆ ಪ್ರಸ್ತಾಪದಿಂದ ಹಿಂದೆ ಸರಿಯುತ್ತಾರೆಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ,
ಈಗಿರುವ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯಾಗುವುದಿಲ್ಲ ಎಂದು ತಮ್ಮ ಆಪ್ತರ ಬಳಿ ಸ್ಪಷ್ಟಪಡಿಸಿದ್ದಾರೆಂದು ತಿಳಿದು ಬಂದಿದೆ. ಮೈತ್ರಿ ಸರ್ಕಾರದ ಆರಂಭದಿಂದಲೂ ಕಾಂಗ್ರೆಸ್ನ ಒಂದು ಗುಂಪು ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎಂದು ಬಹಿರಂಗವಾಗಿಯೇ ಹೇಳಿಕೊಂಡು ತಿರುಗಾಡುತ್ತಿತ್ತು. ಆ ರೀತಿ ಹೇಳಿದವರೇ ಈಗ ಮೈತ್ರಿ ಸರ್ಕಾರದ ವಿರುದ್ಧ ಮುನಿಸಿಕೊಂಡು ರಾಜೀನಾಮೆ ಸಲ್ಲಿಸಿದ್ದಾರೆ.
ಈಗ ರಾಜೀನಾಮೆ ಸಲ್ಲಿಸಿರುವ ಕಾಂಗ್ರೆಸ್ನ 13 ಶಾಸಕರಲ್ಲಿ ಸಿದ್ದರಾಮಯ್ಯ ಅವರ ಆಪ್ತರೇ ಅರ್ಧಕ್ಕೂ ಹೆಚ್ಚಿದ್ದಾರೆಂಬ ಮಾತುಗಳು ಕೇಳಿ ಬರುತ್ತಿದ್ದು, ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಮಾಡಿದರೆ ಅವರು ವಾಪಸ್ ಬಂದರೆ ಸರ್ಕಾರ ರಕ್ಷಿಸಿಕೊಳ್ಳಬಹುದು ಎಂಬ ಲೆಕ್ಕಾಚಾರ ಮೈತ್ರಿ ಪಕ್ಷಗಳ ನಾಯಕರಲ್ಲಿ ಚರ್ಚೆಯಾಗುತ್ತಿದೆ.
ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಆಪ್ತರ ಜೊತೆ ಹೇಳುವ ಮೂಲಕ ಮೈತ್ರಿ ಸರ್ಕಾರದಲ್ಲಿ ನಾಯಕತ್ವ ವಹಿಸಿಕೊಳ್ಳಲು ಸಿದ್ದ ಇಲ್ಲ ಎಂಬ ಸಂದೇಶ ರವಾನಿಸಿದ್ದಾರೆ ಎನ್ನಲಾಗುತ್ತಿದೆ.
ಈಗಾಗಲೇ ರಾಜೀನಾಮೆ ಸಲ್ಲಿಸಿರುವ ಬೈರತಿ ಬಸವರಾಜ್, ಎಸ್.ಟಿ. ಸೋಮಶೇಖರ್, ಮುನಿರತ್ನ ಅವರು ಸಿದ್ದರಾಮಯ್ಯ ಪಾಳಯದಲ್ಲಿಯೇ ಗುರುತಿಸಿಕೊಂಡಿರುವವರು. ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರೂ ಸಿದ್ದರಾಮಯ್ಯ ಅವರನ್ನು ಹೊಗಳುತ್ತಲೇ ಇದ್ದಾರೆ. ಹಿರಿಯ ಶಾಸಕ ರಾಮಲಿಂಗಾರೆಡ್ಡಿ, ಜೆಡಿಎಸ್ನ ಗೋಪಾಲಯ್ಯ ಕೂಡ ಸಿದ್ದರಾಮಯ್ಯ ಅವರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಅವರ ನಾಯಕತ್ವಕ್ಕೆ ಬೆಂಬಲ ನೀಡುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಅಪಖ್ಯಾತಿಗೆ ಹಿಂಜರಿಕೆ: ಮೈತ್ರಿ ಸರ್ಕಾರದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದುಕೊಂಡು ಈಗ ತಮ್ಮ ಆಪ್ತ ಶಾಸಕರು ರಾಜೀನಾಮೆ ಸಲ್ಲಿಸಿದರೂ, ಅವರನ್ನು ಮನವೊಲಿಕೆ ಮಾಡದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಅನುಮಾನದ ಮಾತುಗಳು ಸಿದ್ದರಾಮಯ್ಯ ಅವರ ಮೇಲೆ ಕೇಳಿ ಬರುತ್ತಿವೆ. ಒಂದು ವೇಳೆ, ಪರಿಸ್ಥಿತಿಯ ಲಾಭ ಪಡೆಯಲು ಮುಂದಾದರೆ, ಮುಖ್ಯಮಂತ್ರಿಯಾಗಲು ಇಷ್ಟೆಲ್ಲ ನಾಟಕ ಮಾಡಿದರು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಮೂಡುತ್ತದೆ. ಅದರಿಂದ ವಯಕ್ತಿಕ ವರ್ಚಸ್ಸಿಗೆ ಧಕ್ಕೆಯಾಗುತ್ತದೆ ಎಂಬ ಅಭಿಪ್ರಾಯವನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಬಹುಮತ ಬಂದ್ರೆ ನೋಡೋಣ: ಶಾಸಕರ ರಾಜೀನಾಮೆ ವಿಷಯದಲ್ಲಿ ತಮ್ಮ ಮೇಲೆ ಆರೋಪಗಳು ಕೇಳಿ ಬಂದಿದ್ದರೂ, ಮುಂಬೈಗೆ ತೆರಳಿರುವ ಅತೃಪ್ತರನ್ನು ಸಂಪರ್ಕಿಸುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, ಆಪ್ತ ಶಾಸಕರು ಒಬ್ಬೊಬ್ಬರು ಒಂದೊಂದು ವಯಕ್ತಿಕ ಕಾರಣಗಳನ್ನು ನೀಡುವುದರಿಂದ ಮನವರಿಕೆ ಮಾಡುವ ಪ್ರಯತ್ನ ನಡೆಸಿದರೂ ಒಪ್ಪುವ ಸಾಧ್ಯತೆ ಇಲ್ಲ ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಲು ಹಿಂದೇಟು ಹಾಕಿದರೂ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬಹುಮತ ಬಂದರೆ ಮತ್ತೆ ಮುಖ್ಯಮಂತ್ರಿಯಾಗುವ ಬಗ್ಗೆ ಯೋಚಿಸೋಣ ಎಂಬ ಅಭಿಪ್ರಾಯವನ್ನೂ ಆಪ್ತರ ಬಳಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು, ಮತ್ತೂಂದು ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾವೇ ಮುಖ್ಯಮಂತ್ರಿ ಆಗುವ ಆಲೋಚನೆ ಹೊಂದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಪ್ರತಿಪಕ್ಷದಲ್ಲಿ ಕೂರಲು ಒಲವು: ಮೈತ್ರಿ ಸರ್ಕಾರದಲ್ಲಿನ ಗೊಂದಲಗಳಿಂದ ಕಾಂಗ್ರೆಸ್ಗೆ ಹೆಚ್ಚಿನ ತೊಂದರೆಯಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿರುವುದರಿಂದ ಈಗಿರುವ ಪರಿಸ್ಥಿತಿಯಲ್ಲಿ ಅತೃಪ್ತರನ್ನು ವಾಪಸ್ ಕರೆಸುವ ಬದಲು ಸರ್ಕಾರ ಪತನವಾದರೂ ಚಿಂತೆಯಿಲ್ಲ. ಪ್ರತಿಪಕ್ಷದಲ್ಲಿ ಕೂಡುವುದೇ ಸೂಕ್ತ ಎಂಬ ಅಭಿಪ್ರಾಯವನ್ನು ಸಿದ್ದರಾಮಯ್ಯ ಹೊಂದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೈ ಕಮಾಂಡ್ಗೂ ತಮ್ಮ ಅಭಿಪ್ರಾಯ ತಿಳಿಸಿರುವ ಸಿದ್ದರಾಮಯ್ಯ, ಮೈತ್ರಿ ಸರ್ಕಾರದ ಪತನಕ್ಕೆ ತಾವು ಕಾರಣ ಎಂಬ ಹಣೆ ಪಟ್ಟಿ ಕಟ್ಟಿಕೊಳ್ಳಬಾರದು ಎನ್ನುವ ಕಾರಣಕ್ಕೆ ಮೈತ್ರಿ ಸರ್ಕಾರದಲ್ಲಿ ಮುಂದುವರೆಯುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಕೃಪೆ: ವಿಜಯವಾಣಿ